ಸ್ಥಳೀಯವಾಗಿ ಸ್ಪಂದಿಸಲು ಜನತಾ ದರ್ಶನ ಕಾರ್ಯಕ್ರಮ ಎಲ್ಲಾ ತಾಲೂಕುಗಳಲ್ಲಿ ನಡೆಸಲಾಗುತ್ತದೆ: ಸಚಿವ ದಿನೇಶ್ ಗುಂಡೂರಾವ್
ದ.ಕ. ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ

ಬಂಟ್ವಾಳ : ಆಡಳಿತವನ್ನು ಜನರ ಬಾಗಿಲಿಗೆ ಕೊಂಡೊಯ್ದು ಅವರ ಸಮಸ್ಯೆಗಳಿಗೆ ಸ್ಥಳೀಯವಾಗಿ ಸ್ಪಂದಿಸಲು ಜನತಾ ದರ್ಶನ ಕಾರ್ಯಕ್ರಮ ಎಲ್ಲಾ ತಾಲೂಕುಗಳಲ್ಲಿ ನಡೆಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಬುಧವಾರ ಬಂಟ್ವಾಳ ತಾಲೂಕು ಬಿ.ಸಿ.ರೋಡ್ನಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನಪರವಾದ ಆಡಳಿತ ವ್ಯವಸ್ಥೆ ರೂಪಿಸಲು ಜನತಾ ದರ್ಶನ ಕಾರ್ಯಕ್ರಮ ಮಾಡಲಾಗುತ್ತಿದೆ. ಹಿರಿಯ ಅಧಿಕಾರಿಗಳ ಮೂಲಕ ಈ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತದೆ. ಸರಕಾರದ ವಿವಿಧ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಕ್ಷಿಪ್ರವಾಗಿ ದೊರಕಿಸಲು ಜನತಾ ದರ್ಶನ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಜನರಿಗೆ ನೀಡಿದ ಭರವಸೆಯನ್ನು ಪ್ರಾಮಾಣಿಕವಾಗಿ ಈಡೇರಿಸಿದೆ. ಕೋಟ್ಯಾಂತರ ಜನರಿಗೆ ಅತೀ ಕಡಿಮೆ ಅವಧಿಯಲ್ಲಿ ವಿವಿಧ ಆರ್ಥಿಕ ನೆರವು ಯೋಜನೆಗಳನ್ನು ಯಾವುದೇ ಅಡೆತಡೆಗಳಿಲ್ಲದೆ ಅವರಿಗೆ ತಲುಪಿಸಿದೆ. ಇಡೀ ದೇಶಕ್ಕೆ ಗ್ಯಾರಂಟಿ ಯೋಜನೆಗಳು ಮಾದರಿಯಾಗಿದೆ ಎಂದರು.
ಇಂದು ಬಂಟ್ವಾಳ ತಾಲೂಕಿನ 177 ಮಂದಿಗೆ ಹಕ್ಕುಪತ್ರ ನೀಡಲಾಗುತ್ತಿದ್ದು, ಜನರಿಗೆ ನೆಲದ ಭದ್ರತೆ ನೀಡುವ ಕಾರ್ಯಕ್ರಮವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅರ್ಹರಿಗೆ ಹಕ್ಕು ಪತ್ರ ವಿತರಿಸಲಾಗುತ್ತದೆ ಎಂದು ಹೇಳಿದರು.
ಅಧಿಕಾರಿಗಳು ಸಾರ್ವಜನಿಕರನ್ನು ಗೌರವಿಸಿ ಕೆಲಸ ಮಾಡಬೇಕು. ಸರ್ಕಾರಿ ಕೆಲಸದಲ್ಲಿ ಬಡ ಜನರಿಗೆ, ದುರ್ಬಲರಿಗೆ ಆದ್ಯತೆ ನೀಡಬೇಕೆಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳು ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದರು.
ಶಾಸಕರಾದ ಮಂಜುನಾಥ್ ಭಂಡಾರಿ, ಅಶೋಕ್ ಕುಮಾರ್ ರೈ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ, ಮಾಜಿ ಸಚಿವ ರಮಾನಾಥ ರೈ, ಗೇರು ಅಭಿವೃದ್ಧಿ ನಿಗಮದ ಅಧಕ್ಷೆ ಮಮತಾ ಗಟ್ಟಿ, ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಉಪಾಧ್ಯಕ್ಷ ಮೂನಿಶ್ ಆಲಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ , ಮಾಜಿ ಎಂಎಲ್ ಸಿ ಹರೀಶ್ ಕುಮಾರ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಹಾಗೂ ಜಿಲ್ಲಾ,ತಾಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಯೋಜನೆಗಳ ಫಲಾನುಭವಿಗಳಿಗೆ ಸಚಿವರು ಸವಲತ್ತುಗಳನ್ನು ವಿತರಿಸಿದರು. ಜನತಾದರ್ಶನದಲ್ಲಿ ಒಟ್ಟು 121 ಅರ್ಜಿಗಳನ್ನು ಸ್ವೀಕರಿಸಲಾಯಿತು. ಕೆಲ ಅರ್ಜಿಗಳಿಗೆ ಸ್ಥಳದಲ್ಲೆ ಪರಿಹಾರ ನೀಡಿದರೆ,ಕೆಲ ಅರ್ಜಿಗಳನ್ನು ವಿಲೆಗಾಗಿ ಆಯಾಯ ಇಲಾಖೆಗೆ ರವಾನಿಸಲಾಯಿತು.
ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಸ್ವಾಗತಿಸಿದರು. ತಾ.ಪಂ.ಕಾರ್ಯ ನಿರ್ವಹಣಾಧಿಕಾರಿ ಸಚ್ಚಿನ್ ಕುಮಾರ್ ವಂದಿಸಿದರು. ದೈಹಿಕ ಶಿಕ್ಷಕ ಜಯರಾಮ್ ಕಾರ್ಯಕ್ರಮ ನಿರೂಪಿಸಿದರು.