ಸಾರಿಗೆ ಇಲಾಖೆ ಮಕ್ಕಳ ಸ್ನೇಹಿಯಾಗಿರಲಿ: ಡಾ.ತಿಪ್ಪೇಸ್ವಾಮಿ

ಮಂಗಳೂರು ಫೆ.20: ಶಾಲಾ ಮಕ್ಕಳ ಶಿಕ್ಷಣದಲ್ಲಿ ಸಾರಿಗೆ ಇಲಾಖೆಯು ಮಹತ್ತರವಾದ ಪಾತ್ರ ವಹಿಸುತ್ತದೆ. ಸಾರಿಗೆ ಇಲಾಖೆಯು ಮಕ್ಕಳ ಸ್ನೇಹಿಯಾಗಿ ರೂಪುಗೊಳಿಸಬೇಕಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.
ನಗರದ ಕೆಎಸ್ಸಾರ್ಟಿಸಿ ನಿಯಂತ್ರಣ ಅಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ 2016 ಮತ್ತು ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರಿಗೆ ಬಸ್‌ಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಸಹಾಯವಾಣಿ 112 ಸಂಖ್ಯೆಯನ್ನು ಪ್ರದರ್ಶಿಸಬೇಕು. ಬಸ್ ಚಾಲಕರಿಗೆ ಮತ್ತು ನಿರ್ವಾಹಕರಿಗೆ ಮಕ್ಕಳ ರಕ್ಷಣಾ ಕಾಯ್ದೆ ಮತ್ತು ಮಕ್ಕಳ ಕಾನೂನುಗಳ ಬಗ್ಗೆ ತರಬೇತಿ ನೀಡಬೇಕು. ಸಾರಿಗೆ ವ್ಯವಸ್ಥೆಯಲ್ಲಿ ಮಕ್ಕಳಿಗಾಗುವ ಸಮಸ್ಯೆಗಳ ಕುರಿತು ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿ ಇಲಾಖೆಯನ್ನು ಮಕ್ಕಳ ಸ್ನೇಹಿ ಸಾರಿಗೆಯನ್ನಾಗಿ ಮಾಡಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಲಹೆಗಳನ್ನು ನೀಡಿದರು.
ದ.ಕ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್, ಜಿಲ್ಲೆಯ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಮಕ್ಕಳ ರಕ್ಷಣಾಧಿಕಾರಿ ವಜೀರ್ ಅಹ್ಮದ್, ಮಕ್ಕಳ ಸಹಾಯವಾಣಿ ಸಂಯೋಜಕ ಗಣೇಶ್ ಉಪಸ್ಥಿತರಿದ್ದರು.





