ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು, ಫೆ.24: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 23 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಗುಲ್ಬರ್ಗ ಜಿಲ್ಲೆಯ ಶೇಕ್ ಸಿಕಂದರ್ (22) ಮತ್ತು ಕಾವೂರಿನ ತೌಫೀಕ್ (29) ಎಂದು ಗುರುತಿಸಲಾಗಿದೆ. ಈ ಪೈಕಿ ಶೇಖ್ ಸಿಕಂದರ್ ವಿರುದ್ಧ ಗುಲ್ಬರ್ಗದ ರೋಜಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಮಾದಕ ವಸ್ತುವನ್ನು ಮುಂಬೈಯಿಂದ ಖರೀದಿಸಿ ಗುಲ್ಬರ್ಗ ಮೂಲಕ ಮಂಗಳೂರಿಗೆ ಸಾಗಾಟ ಮಾಡಿ ಕೊಂಡು ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರ ಕೂಳೂರು ಪರಿಸರದಲ್ಲಿ ಕಾರ್ಯಾಚರಣೆ ನಡೆಸಿದರು.
ಆರೋಪಿಗಳಿಂದ 1,15,000 ರೂ. ಮೌಲ್ಯದ 23 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 2 ಮೊಬೈಲ್ ಫೋನ್ಗಳು, ಸುಝುಕಿ ಸ್ಕೂಟರ್ ವಶಪಡಿಸಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 2,10,000 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ರ ಮಾರ್ಗದರ್ಶನದಲ್ಲಿ ನಡೆದ ಪತ್ತೆ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ., ಎಸ್ಸೈ ಶರಣಪ್ಪಭಂಡಾರಿ, ಎಎಸ್ಸೈ ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.