ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

ಮಂಗಳೂರು: ಮಾದಕ ವಸ್ತು ಎಂಡಿಎಂಎ ನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ ಮತ್ತು ಮಾರಾಟ ಮಾಡು ತ್ತಿದ್ದ ಆರೋಪದಲ್ಲಿ ನಗರದ ನೆಹರೂ ಮೈದಾನದ ಬಳಿ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ದಸ್ತಗಿರಿ ಮಾಡಿ, ಆತನಿಂದ 27 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ಸಜೀಪಮೂಡ ಗ್ರಾಮದ ನಗ್ರಿ ನಿವಾಸಿ, ಡ್ರಗ್ ಪೆಡ್ಲರ್ ಆಸಿಫ್ ಯಾನೆ ಆಚಿ(32) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಬಳಿಯಿಂದ 1,35,000 ರೂ. ಮೌಲ್ಯದ 27 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,45,500 ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಆಸಿಫ್ ಎಂಡಿಎಂಎ ನ್ನು ಬೆಂಗಳೂರಿನಲ್ಲಿ ಖರೀದಿಸಿಕೊಂಡು ತಂದು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ನಡೆದಿದೆ ತನಿಖೆಯಿಂದ ತಿಳಿದುಬಂದಿದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ನೆಹರೂ ಮೈದಾನದ ಪರಿಸರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಈ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿ ಆಸಿಫ್ ವಿರುದ್ಧ ಈ ಹಿಂದೆ 2018 ನೇ ಇಸವಿಯಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ, 2021ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಹಾಗೂ 2023 ನೇ ಇಸವಿಯಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ 3 ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ರವರ ನೇತೃತ್ವದಲ್ಲಿ ಪಿಎಸ್‌ಐ ಶರಣಪ್ಪ ಭಂಡಾರಿ, ಎಎಸ್‌ಐ ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.