ಉಚಿತ ರಂಗ ರಂಗು ರಜಾ ಮೇಳ ಉದ್ಘಾಟನೆ

ಕುಂದಾಪುರ, ಮೇ 15: ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ವತಿಯಿಂದ ಸರಕಾರಿ ಶಾಲೆ ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಹಮ್ಮಿಕೊಳ್ಳಲಾಗಿರುವ ರಂಗರಂಗು ರಜಾ ಮೇಳವನ್ನು ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರ ಕೆ.ಆರ್.ನಾಯಕ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಇಂತಹ ರಂಗ ಶಿಬಿರದಲ್ಲಿ ವಿದ್ಯಾರ್ಥಿಗಳ ಕಲಿಕೆ ಸಹಜವಾಗಿ ವಿಕಸಿಸುವು ದಲ್ಲದೆ ಸದಾ ನೆನಪಿನಲ್ಲಿ ಉಳಿಯುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಸ್ವಯಂ ಕಲಿಕೆ, ಸ್ವಯಂಶಿಸ್ತು ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿ ಮಕ್ಕಳ ಮುಂದಿನ ಸಾಧನೆಗೆ ದಾರಿ ಮಾಡಿಕೊಡುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಹಿರಿಯ ಮೇಲ್ವಿಚಾರಕಿ ಸುಜಯ ಶುಭ ಹಾರೈಸಿದರು. ಸಮುದಾಯದ ಸದಸ್ಯ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಅಶೋಕ್ ತೆಕ್ಕಟ್ಟೆ, ಚಿನ್ನಾ ಗಂಗೇರ, ಅಕ್ಷರ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ರವಿ ವಿ.ಎಂ, ಸಮುದಾಯದ ಹಿರಿಯ ಸಂಗಾತಿ ಉತ್ಕಲ ಅಶ್ವತ್ ಕುಮಾರ್ ಉಪಸ್ಥಿತರಿದ್ದರು.
ಸಮುದಾಯ ಕುಂದಾಪುರದ ಅಧ್ಯಕ್ಷ ಡಾ.ಸದಾನಂದ ಬೈಂದೂರು ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸಮುದಾಯದ ಕಾರ್ಯದರ್ಶಿ ವಾಸುದೇವ ಗಂಗೇರ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ತಿಮ್ಮಪ್ಪ ಗುಲ್ವಾಡಿ ವಂದಿಸಿದರು.







