ಮೀಫ್ ವಿದ್ಯಾ ಸಂಸ್ಥೆಗಳ ದೈಹಿಕ ಶಿಕ್ಷಕರಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆ ಬಗ್ಗೆ ತರಬೇತಿ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀಫ್ ವಿದ್ಯಾ ಸಂಸ್ಥೆಗಳ ಒಕ್ಕೂಟದ ವತಿಯಿಂದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ದೈಹಿಕ ಶಿಕ್ಷಕರು ಮತ್ತು ಶಿಕ್ಷಕಿಯರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಬುಧವಾರ ಮಂಗಳೂರಿನ ಅಡ್ಯಾರ್‌ನಲ್ಲಿ ಆಯೋಜಿಸಲಾಯಿತು.
ರಾಷ್ಟ್ರೀಯ ಹಬ್ಬಗಳ ಅಂಗವಾಗಿ ಜರಗುವ ಧ್ವಜಾರೋಹಣ, ಪಥಸಂಚಲನೆ, ಗೌರವರಕ್ಷೆ ಸ್ವೀಕೃತಿ ಇತ್ಯಾದಿ ಕಾರ್ಯಕ್ರಮಗಳಲ್ಲಿ ಪಾಲಿಸಬೇಕಾದ ಶಿಷ್ಟಾಚಾರಗಳು ಮತ್ತು ನಿಯಮಗಳನ್ನು ಪ್ರಾಯೋಗಿಕವಾಗಿ ಶಿಕ್ಷಕರಿಗೆ ತರಬೇತಿ ನೀಡಲಾಯಿತು.
ಕಾರ್ಯಾಗಾರದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ ಸೋಜ ನೆರವೇರಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯ ಮಟ್ಟದ ಪಿಇಟಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ, ಉಪಾಧ್ಯಕ್ಷ ಅರುಣ್ ಪ್ರಸಾದ್ ರೈ ಮತ್ತು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ಪ್ರಧಾನ ಕಾರ್ಯದರ್ಶಿ ಪ್ರತಿಮ್ ಕುಮಾರ್ ತರಬೇತಿ ನೀಡಿದರು.
ಮೀಫ್ ಕೇಂದ್ರ ಸಮಿತಿಯ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ ಸಮಾರಂಭದ ಅಧ್ಯಕ್ಷತೆ ವಹಿಸಿದರು.
ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್ ತರಬೇತುದಾರರನ್ನು ಪರಿಚಯಿಸಿದರು. ಉಪಾಧ್ಯಕ್ಷ ಪರ್ವೇಜ್ ಅಲಿ ವಂದಿಸಿದರು. ಕಾರ್ಯದರ್ಶಿಗಳಾದ ಅನ್ವರ್ ಹುಸೈನ್ ಗೂಡಿನಬಳಿ, ಶಹಮ್, ಮತ್ತು ಬರಕಾ ವಿದ್ಯಾ ಸಂಸ್ಥೆಯ ಜನರಲ್ ಮ್ಯಾನೇಜರ್ ಸಮೀರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಾಗಾರದ ಅಂಗವಾಗಿ ನಡೆದ ಅಣುಕು ಪಥಸಂಚಲನೆ ಮತ್ತು ಗೌರವರಕ್ಷೆಯನ್ನು ಸೌದಿ ಅರೇಬಿಯಾದ ಅಲ್-ಮುಝಈನ್ ಸಂಸ್ಥೆಯ ಮಾಲಕರು ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಝಕರಿಯ ಜೋಕಟ್ಟೆ ಸ್ವೀಕರಿಸಿದರು. ಮುಹಮ್ಮದ್ ಶಾರಿಕ್ ಕಾರ್ಯಕ್ರಮ ನಿರೂಪಿಸಿದರು.
ಈ ಕಾರ್ಯಾಗಾರರ ಕ್ರಮ ಬದ್ಧ ಅನುಷ್ಠಾನಕ್ಕಾಗಿ ಹತ್ತು ವಿದ್ಯಾ ಸಂಸ್ಥೆಗಳನ್ನು ಆಯ್ಕೆ ಮಾಡಲಾಯಿತು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಮೀಫ್ ವಿದ್ಯಾ ಸಂಸ್ಥೆಗಳ ಒಟ್ಟು ೬೮ ಮಂದಿ ದೈಹಿಕ ಶಿಕ್ಷಕರು ಮತ್ತು ಶಿಕ್ಷಕಿಯರು ಈ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.







