ಜನರ ಆರೋಗ್ಯ ರಕ್ಷಣೆಯಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದು: ಡಾ.ಕಿಶೋರ್ ಕುಮಾರ್

ಮಂಗಳೂರು: ಆರೋಗ್ಯ ರಕ್ಷಣೆಗಾಗಿ ಸರಕಾರ ಜಾರಿಗೊಳಿಸುವ ಹಲವಾರು ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿ ಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಹೇಳಿದರು.
ದ.ಕ.ಜಿಲ್ಲಾಡಳಿತ, ಜಿಪಂ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಗುರುವಾರ ಪತ್ರಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಆರೋಗ್ಯ ಇಲಾಖೆಯಿಂದ ಜಿಲ್ಲಾದ್ಯಂತ ಸಾಕಷ್ಟು ಐಇಸಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಆದಾಗ್ಯೂ ಇಲಾಖೆಯ ಕಾರ್ಯಕ್ರಮಗಳು, ಯೋಜನೆಗಳನ್ನು ಸಾರ್ವಜನಿಕರಿಗೆ ತಿಳಿಸುವಲ್ಲಿ ದೃಶ್ಯ ಹಾಗೂ ಪತ್ರಿಕಾ ಮಾಧ್ಯಮಗಳ ಪಾತ್ರ ಅತ್ಯಂತ ಪರಿಣಾಮಕಾರಿಯಾಗಿದೆ. ಪ್ರತಿ ವರ್ಷ ಆರೋಗ್ಯ ಇಲಾಖೆಗೆ 2-3 ಕಾರ್ಯಕ್ರಮಗಳು ಹೆಚ್ಚುವರಿಯಾಗಿ ಸೇರ್ಪಡೆಯಾಗುತ್ತವೆ. ಅವುಗಳ ವಿವರ ಹಾಗೂ ಮಾಹಿತಿ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುವುದರಿಂದ ಸಾರ್ವಜನಿಕರಿಗೆ ನೂತನ ಕಾರ್ಯಕ್ರಮಗಳ ಪರಿಚಯವಾಗಿ, ಪ್ರಯೋಜನ ಪಡೆಯಲು ಸಹಕಾರಿಯಾಗಿದೆ ಎಂದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್‌ಐ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಸುದರ್ಶನ್, ಪ್ರಭಾರ ಜಿಲ್ಲಾ ಸವೇಕ್ಷಣಾಧಿ ಕಾರಿ ಡಾ. ನವೀನ್ ಚಂದ್ರ ಕುಲಾಲ್, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಬದ್ರುದ್ದೀನ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ರಾಜೇಶ್, ಡಾ.ದೀಪಾ ಪ್ರಭು, ಡಾ.ಯಶಸ್ವಿನಿ, ಪುಂಡಲಿಕಾ ಲಕೋಟಿ ಮಾತನಾಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ.ಉಳೆಪಾಡಿ ಕಾರ್ಯಕ್ರಮ ನಿರೂಪಿಸಿದರು.







