ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

ಬಂಧಿತ ಆರೋಪಿಗಳು
ಮಂಗಳೂರು: ನಗರದ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 24.57 ಗ್ರಾಂ ತೂಕದ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ.
*ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೊ ರಿಕ್ಷಾದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ನ.4ರಂದು ದಾಳಿ ನಡೆಸಿ ಚಾಲಕ ಅಡ್ಯಾರ್ ಕಣ್ಣೂರಿನ ಅಬ್ದುಲ್ ಸಲಾಂ (39)ನನ್ನು ಬಂಧಿಸಿ 1.20 ಲಕ್ಷ ರೂ. ಮೌಲ್ಯದ ನಿಷೇದಿತ ಮಾದಕ ವಸ್ತು ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿಯಿಂದ ಆಟೊ ರಿಕ್ಷಾ, ಮೊಬೈಲ್ ಪೋನ್, ತೂಕ ಮಾಪನ ಸಹಿತ 2,30,500 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.6 ರಂದು ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬೋಳಿಯಾರು ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬೋಳಿಯಾರು ಜಾರದಗುಡ್ಡದ ಮುಹಮ್ಮದ್ ನಾಸೀರ್ ಯಾನೆ ಶಾಕೀರ್ ಚಾಕಿ (28) ಎಂಬಾತನನ್ನು ವಶಕ್ಕೆ ಪಡೆದುಕೊಂಡು 1.20 ಲಕ್ಷ ರೂ. ಮೌಲ್ಯದ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಬೈಕ್, ಮೊಬೈಲ್ ಫೋನ್ ಸಹಿತ 2.05 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.







