ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಸಮಿತಿ ಸಭೆಗಳು ಕಡ್ಡಾಯವಾಗಿ ನಡೆಸಬೇಕು: ದ.ಕ.ಜಿಲ್ಲಾಧಿಕಾರಿ

ಮಂಗಳೂರು: ದೌರ್ಜನ್ಯಕ್ಕೊಳಗಾದ ಮಜಿಳೆಯರಿಗೆ ರಕ್ಷಣೆ ನೀಡುವ ಸಖಿ ಒನ್ ಸ್ಟಾಪ್ ಕೇಂದ್ರದ ಸಹಾಯವಾಣಿ ಕುರಿತು ಹೆಚ್ಚಿನ ಪ್ರಚಾರ ಮಾಡಬೇಕು ಎಂದು ದ.ಕ.ಜಿಲ್ಲಾಧಿಕಾರಿದರ್ಶನ್ ದರ್ಶನ್ ಎಚ್.ವಿ. ಸೂಚಿಸಿದ್ದಾರೆ.
ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಕ್ಷಣ ಹಾಗೂ ಪೊಲೀಸ್ ಇಲಾಖೆಯವರು ಸೇರಿ ಶಾಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಸಕ್ರಿಯವಾಗಿ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಸಮಿತಿ ಸಭೆಗಳು ನಡೆಯುವಂತೆ ಕ್ರಮ ವಹಿಸಿ ಸಭೆಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಕಾಣೆಯಾದ ಪ್ರಕರಣಗಳು, ಶಾಲೆಯಿಂದ ಹೊರಗುಳಿಯುವಿಕೆ, ಬಾಲಕಾರ್ಮಿಕತೆ, ಬಾಲ್ಯ ವಿವಾಹಗಳ ಬಗ್ಗೆ ಚರ್ಚಿಸಿ ತಾಲೂಕು ಸಮಿತಿಗೆ ಮಾಹಿತಿ ನೀಡಬೇಕು ಎಂದ ಡಿಸಿ ಸೂಚಿಸಿದರು.
ಬಾಲಗರ್ಭಿಣಿ, ಪೊಕ್ಸೊ ಪ್ರಕರಣ, ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಗ್ರಾಪಂ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಕಾವಲು ಸಮಿತಿ ಸಭೆ ನಡೆಸಬೇಕು. ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲ ನೆಗೊಳಿಸಲು ಜನಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಕೌಟುಂಬಿಕ ದೌರ್ಜನ್ಯ ತಡೆಕಾಯ್ದೆಯಡಿ 39 ಪ್ರಕರಣಗಳು ದಾಖಲಾಗಿದೆ. ಮಹಿಳೆಯರ ಮತ್ತು ಮಕ್ಕಳ ಮಾರಾಟ/ಸಾಗಾಟ/ ಕಾಣೆಯಾದ ಪ್ರಕರಣಗಳಲ್ಲಿ 35 ಪ್ರಕರಣಗಳು ದಾಖಲಾಗಿದೆ. ಈ ಪೈಕಿ 33 ಪ್ರಕರಣಗಳು ಇತ್ಯರ್ಥ ಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಮಾಹಿತಿ ನೀಡಿದರು.
"ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿದರೆ ಲೈಸನ್ಸ್ ರದ್ದು"
ಮಂಗಳೂರು: 18 ವಷರ್ ಪ್ರಾಯದೊಳಗಿನ ಮಕ್ಕಳನ್ನು ಬಾಲಕಾರ್ಮಿಕರು ಅಥವಾ ಕಿಶೋರ ಕಾರ್ಮಿಕರನ್ನಾಗಿ ಕೆಲಸಕ್ಕೆ ನೇಮಿಸಿಕೊಂಡಲ್ಲಿ ಸಂಸ್ಥೆಯ ಪರವಾನಿಗೆಯನ್ನು ರದ್ದುಗೊಳಿಸಲು ಮಹಾನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆ, ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಮಿಕ ಇಲಾಖೆಯ ವತಿಯಿಂದ ಬಾಲ ಕಾರ್ಮಿಕರು/ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ, ಬಾಲಕಾರ್ಮಿಕ ನಿಷೇಧದ ಬಗ್ಗೆ ಲೋಗೋ ರಚಿಸಿ ಎಲ್ಲಾ ಸಂಸ್ಥೆಗಳಲ್ಲಿ ಸಾರ್ವಜನಿಕವಾಗಿ ಪ್ರದರ್ಶಿಸಲು ಕ್ರಮ ಕೈಗೊಳ್ಳುವಂತೆ ಡಿಸಿ ಸೂಚಿಸಿದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನಾ ಮತ್ತು ಪುನರ್ವಸತಿ ಸಮಿತಿ ಸಭೆ ಹಾಗೂ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಪ್ರತಿ 3 ತಿಂಗಳಿಗೊಮ್ಮೆ ನಡೆಸಬೇಕು. ಎಲ್ಲಾ ಕಾರ್ಖಾನೆ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆಯ ಸಾರಾಂಶವನ್ನು ಕಡ್ಡಾಯವಾಗಿ ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ನಿರೀಕ್ಷಕರಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಚೈಲ್ಡ್ ಹೆಲ್ಸ್‌ಲೈನ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಸಹಯೋಗದೊಂದಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಹಾಸ್ಟೆಲ್, ಕಾಲನಿ, ಕಾಲೇಜುಗಳಲ್ಲಿ ಜನಜಾಗೃತಿ, ಕಾನೂನು ಅರಿವು ಕಾರ್ಯಾಗಾರ ಹಮ್ಮಿಕೊಳ್ಳಬೇಕು ಎಂದು ಡಿಸಿ ತಿಳಿಸಿದರು.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆಯ ಸಾರಾಂಶವನ್ನು ಪ್ರದರ್ಶಿಸದ 84 ಸಂಸ್ಥೆಗಳ ವಿರುದ್ಧ ಮೊಕದ್ದಮೆ ಹೂಡಲಾಗಿದೆ. 22 ಸಂಸ್ಥೆಗಳಿಗೆ 1,64,000 ರೂ.ದಂಡ ಸಂಗ್ರಹವಾಗಿದೆ. 62 ಪ್ರಕರಣಗಳು ವಿಚಾರಣಾ ಹಂತದಲ್ಲಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ., ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ, ಸಹಾಯಕ ಕಾರ್ಮಿಕ ಆಯುಕ್ತೆ ನಾಝಿಯಾ ಸುಲ್ತಾನಾ ಮತ್ತಿತರರು ಉಪಸ್ಥಿತರಿದ್ದರು.







