ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ಯುವಕ ಮೃತ್ಯು
ಸಾಂದರ್ಭಿಕ ಚಿತ್ರ (PTI)
ಬಾರಿಪಾದ: ಕ್ರಿಕೆಟ್ ಆಡುವಾಗ ಕುಸಿದು ಬಿದ್ದು 28 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಒಡಿಶಾದ ಮಯೂರ್ ಭಂಜ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೈಸಿಂಗ ಪೊಲೀಸ್ ಠಾಣೆ ವ್ಯಾಪ್ತಿಯ ಮನತ್ರಿ ನಿವಾಸಿಯಾದ ಬಿಕಾಸ್ ಕರ್ ಎಂಬ ಯುವಕನು ಕ್ರಿಕೆಟ್ ಪಂದ್ಯ ನಡೆಯುವಾಗಲೇ ದಿಢೀರನೆ ಪ್ರಜ್ಞಾಹೀನವಾಗಿ ನೆಲದ ಮೇಲೆ ಕುಸಿದು ಬಿದ್ದಿದ್ದಾನೆ ಎಂದು ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮನತ್ರಿ ಕಿರು ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿತ್ತು ಎಂದೂ ಅವರು ಹೇಳಿದ್ದಾರೆ.
ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆತ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಯುವಕನ ಸಾವಿನ ಕಾರಣವನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.
ಮೃತದೇಹವನ್ನು ಬಾರಿಪಾದದಲ್ಲಿರುವ ಪಿಆರ್ಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಈ ಸಂಬಂಧ ಅಸಹಜ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ತನಿಖೆಯು ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.