ಉತ್ತರಪ್ರದೇಶ | ಸಂಭಾಲ್ ಹಿಂಸಾಚಾರದ ಕುರಿತು ತನಿಖೆಗೆ ಮೂವರು ಸದಸ್ಯರ ನ್ಯಾಯಾಂಗ ಸಮಿತಿ ರಚನೆ
Photo | PTI
ಲಕ್ನೋ: ಸಂಭಾಲ್ ನ ಜಾಮಾ ಮಸೀದಿಯ ಆವರಣದಲ್ಲಿ ಸಮೀಕ್ಷೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಮೂವರು ಸದಸ್ಯರ ನ್ಯಾಯಾಂಗ ಸಮಿತಿಯನ್ನು ರಚಿಸಿ ಉತ್ತರಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಆದೇಶ ಹೊರಡಿಸಿದ್ದಾರೆ.
ರಾಜ್ಯಪಾಲರು ಈ ಕುರಿತು ಅಧಿಸೂಚನೆಯನ್ನು ಹೊರಡಿಸಿದ್ದು, ಸಾರ್ವಜನಿಕ ಹಿತಾಸಕ್ತಿಗಳನ್ನು ಕಾಪಾಡಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಈ ಕುರಿತು ಸಂಪೂರ್ಣ ತನಿಖೆಯ ಅಗತ್ಯವಿದೆ ಎಂದು ಹೇಳಿದ್ದಾರೆ. ಅಲಹಾಬಾದ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಅರೋರಾ ಅವರ ನೇತೃತ್ವದ ಸಮಿತಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಮೋಹನ್ ಪ್ರಸಾದ್ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಅರವಿಂದ್ ಕುಮಾರ್ ಜೈನ್ ಅವರು ಇರಲಿದ್ದಾರೆ.
ಅಧಿಸೂಚನೆಯ ದಿನಾಂಕದಿಂದ ಎರಡು ತಿಂಗಳೊಳಗೆ ತನಿಖೆ ನಡೆಸಿ ವರದಿಯನ್ನು ನೀಡುವಂತೆ ಆಯೋಗಕ್ಕೆ ಸೂಚಿಸಲಾಗಿದೆ. ಈ ಕುರಿತು ಕಾಲಾವಧಿಯ ವಿಸ್ತರಣೆಗೆ ಸರ್ಕಾರದ ಅನುಮೋದನೆಯ ಅಗತ್ಯವಿರುತ್ತದೆ.
ಸಂಭಾಲ್ ನ ಕೋಟ್ ಗಾರ್ವಿ ಪ್ರದೇಶದಲ್ಲಿನ ಶಾಹಿ ಜಾಮಾ ಮಸೀದಿಯ ಆವರಣದಲ್ಲಿ ಸಮೀಕ್ಷೆ ವೇಳೆ ನಡೆದ ಘರ್ಷಣೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದರು.