ಲಡಾಖ್ | ಹಿಂಸಾತ್ಮಕ ಪ್ರತಿಭಟನೆಯಲ್ಲಿ ನಾಲ್ವರು ಮೃತ್ಯು, ಉಪವಾಸ ಅಂತ್ಯಗೊಳಿಸಿದ ಸೋನಮ್ ವಾಂಗ್ಚುಕ್

ಲೇಹ್: ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಲಡಾಖ್ ಅಪೆಕ್ಸ್ ಬಾಡಿ(LAB) ನೇತೃತ್ವದಲ್ಲಿ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ ಬುಧವಾರ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆಯಲ್ಲಿ ಈವರೆಗೆ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ನಗರದ ಬೀದಿಗಳಲ್ಲಿ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ ಬಿಜೆಪಿ ಕಚೇರಿಗೆ ಮತ್ತು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು.
ಕೇಂದ್ರ ಸರಕಾರ ಹಾಗೂ ಸ್ಥಳೀಯ ಆಡಳಿತವು ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿರುವುದರಿಂದ ಪ್ರತಿಭಟನೆ ತೀವ್ರಗೊಂಡಿದೆ ಎಂದು LAB ಸಂಘಟಕರು ಆರೋಪಿಸಿದ್ದಾರೆ.
ಸೆ.10ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ 15 ಜನರಲ್ಲಿ ಇಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇದಾದ ನಂತರ LAB ಯುವ ಘಟಕವು ಬಂದ್ ಮತ್ತು ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು.







