Assam | ಸಹಜ ಸ್ಥಿತಿಗೆ ಮರಳಿದ ಪಶ್ಚಿಮ ಕರ್ಬಿ ಅಂಗ್ಲಾಂಗ್

Photo Credit : PTI
ಗುವಾಹಟಿ, ಡಿ. 24: ಅಸ್ಸಾಂನ ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ಖೆರೋನಿ ಪ್ರದೇಶ ಬುಧವಾರ ಸಹಜ ಸ್ಥಿತಿಗೆ ಮರಳಿದೆ.
ಗ್ರಾಮದ ಜಾನುವಾರು ಮೇಯಿಸುವ ಮೀಸಲು ಪ್ರದೇಶ (ವಿಜಿಆರ್) ಹಾಗೂ ವೃತ್ತಿಪರ ಮೇಯಿಸುವ ಮೀಸಲು ಪ್ರದೇಶ (ಪಿಜಿಆರ್) ದಿಂದ ಅತಿಕ್ರಮಣಕಾರರನ್ನು ತೆರೆವುಗೊಳಿಸುವಂತೆ ಆಗ್ರಹಿಸಿ ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿತ್ತು.
ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಗ್ಗೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಇಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಮಂಗಳವಾರ ನಡೆದ ಹಿಂಸಾಚಾರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 38 ಪೊಲೀಸ್ ಸಿಬ್ಬಂದಿ ಸೇರಿದಂತೆ 45 ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಗುಂಡು ಹಾರಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾದ ಬುಡಕಟ್ಟು ಕರ್ಬಿ ಸಮುದಾಯದ ಪ್ರತಿಭಟನಕಾರರೋರ್ವರು ಸ್ಥಳೀಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರತಿಭಟನಕಾರರು ಬೆಂಕಿ ಹಚ್ಚಿದ ಮನೆಯೊಳಗೆ ಸಿಲುಕಿದ ಬೆಂಗಾಳಿ ಸಮುದಾಯಕ್ಕೆ ಸೇರಿದ ಅಂಗವಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.
ಹಿಂಸಾಚಾರದಲ್ಲಿ ಪಾಲ್ಗೊಂಡವರನ್ನು ಬಂಧಿಸುವಂತೆ ಆಗ್ರಹಿಸಿ ಪಶ್ಚಿಮ ಕರ್ಬಿ ಅಂಗ್ಲಾಂಗ್-ಹೋಜೈ ಜಿಲ್ಲೆಯ ಗಡಿ ಪ್ರದೇಶದಲ್ಲಿ ಬುಧವಾರ ಬುಡಕಟ್ಟು ಸಮುದಾಯಕ್ಕೆ ಸೇರದ ಜನರ ಗುಂಪೊಂದು ಪ್ರತಿಭಟನೆ ನಡೆಸಿದೆ. ಹಿಂಸಾಚಾರದಲ್ಲಿ ಮೃತಪಟ್ಟ ಬುಡಕಟ್ಟು ಸಮುದಾಯಕ್ಕೆ ಸೇರದ ವ್ಯಕ್ತಿಗಳ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುವಂತೆ ಅವರು ಆಗ್ರಹಿಸಿದ್ದಾರೆ.







