ಥಾಣೆ: ದುಷ್ಕರ್ಮಿಗಳಿಂದ ಕ್ರೈಸ್ತ ಪ್ರಾರ್ಥನಾ ಮಂದಿರಕ್ಕೆ ಹಾನಿ

ಸಾಂದರ್ಭಿಕ ಚಿತ್ರ
ಥಾಣೆ : ಮಹಾರಾಷ್ಟ್ರದ ಥಾಣೆ ನಗರದಲ್ಲಿ ಕ್ರೈಸ್ತ ಸಮುದಾಯಕ್ಕೆ ಸೇರಿದ ಪ್ರಾರ್ಥನಾ ಮಂದಿರಕ್ಕೆ ಅಪರಿಚಿತ ದುಷ್ಕರ್ಮಿಗಳು ಹಾನಿ ಉಂಟು ಮಾಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ನಗರದ ತುಳಸಿಧಾಮ್ ಪ್ರದೇಶದಲ್ಲಿ ಕ್ರೈಸ್ತ ಸಮುದಾಯಕ್ಕೆ ಸೇರಿದ ಪ್ರಾರ್ಥನಾ ಮಂದಿರದಲ್ಲಿ ಈ ಘಟನೆ ನಡೆದಿದೆ.
ಪ್ರಾರ್ಥನಾ ಮಂದಿರದ ಆವರಣಕ್ಕೆ ನುಗ್ಗಿದ ದುಷ್ಕರ್ಮಿಗಳು ಕೆಲವು ಕಿಟಕಿಗಳ ಗಾಜುಗಳು, ಹವಾ ನಿಯಂತ್ರಣ ವ್ಯವಸ್ಥೆಯ ವಯರ್ ಹಾಗೂ ಇಲೆಕ್ಟ್ರಿಕ್ ಮೀಟರ್ಗೆ ಹಾನಿ ಉಂಟು ಮಾಡಿದ್ದಾರೆ. ಪ್ರಾರ್ಥನಾ ಮಂದಿರದ ಬಾಗಿಲಿಗೆ ಆಕ್ಷೇಪಾರ್ಹ ಪದಗಳನ್ನು ಬರೆಯಲಾದ ಬ್ಯಾನರ್ಗಳನ್ನು ಅಳವಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಗುರುವಾರ ಪ್ರಕರಣ ದಾಖಲಿಸಿದ್ದಾರೆ ಹಾಗೂ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
Next Story





