ಕೇರಳ| ವಲಸೆ ಕಾರ್ಮಿಕನ ಥಳಿಸಿ ಹತ್ಯೆ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ; ಸಿಎಂ ಪಿಣರಾಯಿ ವಿಜಯನ್

ಸಿಎಂ ಪಿಣರಾಯಿ ವಿಜಯನ್ | Photo Credit : PTI
ತಿರುವನಂತಪುರ, ಡಿ. 22: ಕಳೆದ ವಾರ ಪಾಲಕ್ಕಾಡ್ನಲ್ಲಿ ಕಳ್ಳನೆಂದು ಶಂಕಿಸಿ ಚತ್ತೀಸ್ಗಢದ ನಿವಾಸಿಯನ್ನು ಥಳಿಸಿ ಹತ್ಯೆಗೈದ ಪ್ರಕರಣದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇರಳ ಸರಕಾರ ಹೇಳಿದೆ.
ಮೃತನ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ಭರವಸೆ ನೀಡಿದ್ದಾರೆ. ಅಲ್ಲದೆ, ಈ ಘಟನೆ ಆಘಾತಕಾರಿ ಎಂದು ಹೇಳಿದ್ದಾರೆ.
ಸೋಮವಾರ ಕೇರಳದಲ್ಲಿದ್ದ ಮೃತನ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದ ಸಿಎಂ ಪಿಣರಾಯಿ ವಿಜಯನ್, ಇಂತಹ ಕೃತ್ಯಗಳು ಕೇರಳದಂತಹ ಪ್ರಗತಿಪರ ಸಮಾಜದ ಗೌರವಕ್ಕೆ ಧಕ್ಕೆ ಉಂಟು ಮಾಡುತ್ತದೆ. ಇದು ಯಾವುದೇ ರೀತಿಯಲ್ಲಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಕಚೇರಿಯಿಂದ ಹೊರಡಿಸಲಾದ ಹೇಳಿಕೆಯಲ್ಲಿ ಪಿಣರಾಯಿ ವಿಜಯನ್, ಈ ಅಪರಾಧಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಜಿಲ್ಲಾ ಪೊಲೀಸ್ ವಿಶೇಷ ತನಿಖಾ ತಂಡ ಈ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಪ್ರಕರಣದ ವಿವರಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಾಗೂ ಅಗತ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ಪ್ರಾರಂಭಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.





