ʼಚುನಾವಣಾ ಅಕ್ರಮಗಳ ವಿರುದ್ಧ ರಾಷ್ಟ್ರೀಯ ಆಂದೋಲನʼ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ
Screengrab: INC/youtube
ಹೊಸದಿಲ್ಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ನಡುವೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ನಡೆದಿದೆ. ಸಭೆಯಲ್ಲಿ ಹಲವು ನಿರ್ಣಯವನ್ನು ತೆಗೆದುಕೊಳ್ಳಲಾಗಿದ್ದು, ಚುನಾವಣಾ ಅಕ್ರಮಗಳ ವಿರುದ್ಧ ರಾಷ್ಟ್ರೀಯ ಆಂದೋಲನ ಆರಂಭಿಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ CWC ಸಭೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಕಾರ್ಯವೈಖರಿಯಿಂದ ಭಾರತದಲ್ಲಿ ಚುನಾವಣಾ ಪ್ರಕ್ರಿಯೆಯ ರಾಜಿಯಾಗಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಆರೋಪಿಸಿದೆ. ನ್ಯಾಯಸಮ್ಮತ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಕಳವಳಗಳನ್ನು ಪರಿಹರಿಸಲು ಸಭೆಯಲ್ಲಿ ರಾಷ್ಟ್ರೀಯ ಆಂದೋಲನವನ್ನು ಪ್ರಾರಂಭಿಸುವ ನಿರ್ಣಯವನ್ನು ಅಂಗೀಕರಿಸಲಾಗಿದೆ.
ಪ್ರಧಾನಮಂತ್ರಿಗೆ ನಿಕಟ ಸಂಬಂಧ ಹೊಂದಿರುವ ಅಧಾನಿ ಸಮೂಹದ ಭ್ರಷ್ಟಾಚಾರ, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಮಣಿಪುರದಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಹಿಂಸಾಚಾರ ನಡೆಯುತ್ತಿದ್ದರೂ ಪ್ರಧಾನಿ ಒಮ್ಮೆಯೂ ಭೇಟಿ ನೀಡದಿರುವುದು, ವಿವಿಧ ರಾಜ್ಯಗಳಲ್ಲಿ ಕೋಮು ಉದ್ವಿಗ್ನತೆ ಪ್ರಚೋದಿಸುವ ಬಿಜೆಪಿಯ ಪ್ರಯತ್ನಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಲ್ಲದೆ ಈ ಕುರಿತು ಸಂಸತ್ತಿನ ಅಧಿವೇಶನದಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿದೆ.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಅಪಾಯದಲ್ಲಿದೆ ಎಂದು CWC ಪ್ರತಿಪಾದಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ವಿದ್ಯುನ್ಮಾನ ಮತಯಂತ್ರಗಳನ್ನು ಟೀಕಿಸಿದ್ದಾರೆ. ಪಕ್ಷದೊಳಗಿನ ಆಂತರಿಕ ದೌರ್ಬಲ್ಯ ಮತ್ತು ಗುಂಪುಗಾರಿಕೆಯನ್ನು ತಡೆಯಲು ಕಠಿಣ ನಿರ್ಧಾರಗಳ ಅಗತ್ಯವನ್ನು ಅವರು ಪ್ರತಿಪಾದಿಸಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಇವಿಎಂಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರೆ, ಪ್ರಿಯಾಂಕಾ ಗಾಂಧಿ ವಾದ್ರಾ ಬ್ಯಾಲೆಟ್ ಪೇಪರ್ ಗಳ ಮೂಲಕ ಚುನಾವಣೆ ನಡೆಸುವ ಕುರಿತು ಪ್ರಸ್ತಾಪಿಸಿದರು. ಅಭಿಷೇಕ್ ಸಿಂಘ್ವಿ 100% ವಿವಿಪಿಎಟಿ ಅನುಷ್ಠಾನದ ಬಗ್ಗೆ ಪ್ರತಿಪಾದಿಸಿದರು. ಇವಿಎಂಗಳು, ಹಣದುಬ್ಬರ, ನಿರುದ್ಯೋಗ ಮತ್ತು ಅದಾನಿ ಗ್ರೂಪ್ ವಿರುದ್ಧದ ಆರೋಪಗಳಂತಹ ವಿಷಯಗಳ ಬಗ್ಗೆ ದೃಢವಾದ ನಿಲುವನ್ನು ತೆಗೆದುಕೊಳ್ಳುವಂತೆ ರಾಹುಲ್ ಗಾಂಧಿ ಸಭೆಯಲ್ಲಿ ಪಕ್ಷದ ಸದಸ್ಯರನ್ನು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆ ಬಗ್ಗೆ ವಿಶ್ಲೇಷಿಸಲು ಆಂತರಿಕ ಸಮಿತಿಗಳ ರಚನೆಗೆ CWCಯಲ್ಲಿ ನಿರ್ಧರಿಸಲಾಗಿದೆ. ಚುನಾವಣಾ ಉಸ್ತುವಾರಿಗಳಾಗಿದ್ದ ಅಜಯ್ ಮಾಕನ್ ಮತ್ತು ರಮೇಶ್ ಚೆನ್ನಿತ್ತಲ ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಪಕ್ಷದ ಕಳಪೆ ಪ್ರದರ್ಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.
ಸಾಮಾಜಿಕ ನ್ಯಾಯಕ್ಕಾಗಿ ಜಾತಿ ಗಣತಿ, ಎಸ್ಸಿ, ಎಸ್ಟಿ, ಒಬಿಸಿಗಳ ಮೀಸಲಾತಿ ಮೇಲಿನ 50% ಮಿತಿಯನ್ನು ತೆಗೆದುಹಾಕುವುದು, ನಿರಂತರ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ನಿರುದ್ಯೋಗ, ಹಣದುಬ್ಬರ ಮತ್ತು ಆರ್ಥಿಕ ಅಸಮಾನತೆಯಂತಹ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ನ ಬದ್ಧತೆಯನ್ನು ನಿರ್ಣಯವು ಪುನರುಚ್ಚರಿಸಿದೆ.
ಮಹಾತ್ಮ ಗಾಂಧಿಯವರು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಶತಮಾನೋತ್ಸವದ ಸ್ಮರಣಾರ್ಥ ಕಾರ್ಯಕ್ರಮವನ್ನು ಕರ್ನಾಟಕದ ಬೆಳಗಾವಿಯಲ್ಲಿ ಆಯೋಜಿಸುವುದಾಗಿ CWC ಸಭೆಯಲ್ಲಿ ಘೋಷಿಸಲಾಗಿದೆ. ಇದಲ್ಲದೆ ಚುನಾವಣೆಯಲ್ಲಿ ಬೆಂಬಲಿಸಿದ್ದಕ್ಕೆ ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರದ ಜನರಿಗೆ CWC ಸಭೆಯಲ್ಲಿ ಧನ್ಯವಾದ ಸಲ್ಲಿಸಲಾಗಿದೆ.