ಮಧ್ಯಪ್ರದೇಶ: ಚುನಾವಣಾ ಕರ್ತವ್ಯನಿರತರಾಗಿದ್ದ ಪೊಲೀಸ್ ಪೇದೆ ಹಾಗೂ ಕಾವಲುಗಾರ ಮೃತ್ಯು
ಸಾಂದರ್ಭಿಕ ಚಿತ್ರ (PTI)
ಬೇತುಲ್: ಮಧ್ಯಪ್ರದೇಶದಲ್ಲಿನ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಪಂಜಾಬ್ ಪೊಲೀಸ್ ಪೇದೆ ಸೇರಿದಂತೆ ಇಬ್ಬರು ಗುರುವಾರ ಮೃತಪಟ್ಟಿದ್ದು, ಓರ್ವ ಮಹಿಳೆಗೆ ಅಸ್ತಮಾ ಬಾಧಿಸಿದ್ದರಿಂದ, ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ PTI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮಧ್ಯಪ್ರದೇಶ ಸಾರ್ವಜನಿಕ ಆರೋಗ್ಯ ತಂತ್ರಜ್ಞಾನ ಇಲಾಖೆಯಲ್ಲಿ ಕಾವಲುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ, ಬೇತುಲ್ ನ ಬಾಲಕಿಯರ ಶಾಲೆಯ 123ನೇ ಬೂತ್ ಗೆ ಚುನಾವಣಾ ಕರ್ತವ್ಯಕ್ಕಾಗಿ ನಿಯೋಜಿಸಲ್ಪಟ್ಟಿದ್ದ ಭೀಮರಾಮ್ (55) ಎಂಬವರು ಎದೆನೋವಿಗೆ ಒಳಗಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಮುಲ್ತಾಯಿ ಉಪ ವಿಭಾಗಾಧಿಕಾರಿ ತೃಪ್ತಿ ಪಟೇರಿಯ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಟಿಕಾಮ್ ಗಢ ದಲ್ಲಿನ ಡಿಗೋರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಪಂಜಾಬ್ ಪೊಲೀಸ್ ಪೇದೆ ಜನರಲ್ ಸಿಂಗ್ (53) ಎಂಬವರು ಬುಧವಾರ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಕಶ್ವಾನಿ PTI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
“ಅವರು ಎದೆನೋವಿಗೆ ಒಳಗಾದಾಗ ಅವರನ್ನು ಮೊದಲು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಹಾಗೂ ಸುಧಾರಿತ ಚಿಕಿತ್ಸೆಗಾಗಿ ನಂತರ ಝಾನ್ಸಿ ವೈದ್ಯಕೀಯ ಕಾಲೇಜಿಗೆ ದಾಖಲಾಯಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದ ಅವರು ಬುಧವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
ಚುನಾವಣಾ ಸಾಮಗ್ರಿಗಳನ್ನು ಸಂಗ್ರಹಿಸಿಕೊಂಡು ಉಜ್ಜಯಿನಿಯ ಬದ್ನಾಗರ್ ಗೆ ಚುನಾವಣಾ ಕರ್ತವ್ಯಕ್ಕೆ ತೆರಳಲು ಸಿದ್ಧವಾಗಿದ್ದ 42 ವರ್ಷದ ರಂಜಿತಾ ಡೋಂಗ್ರಾ ಎಂಬ ಮಹಿಳೆಯು ಅಸ್ತಮಾ ಬಾಧಿಸಿದ್ದರಿಂದಾಗಿ ಕುಸಿದು ಬಿದ್ದ ಘಟನೆ ನಡೆದಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
“ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯೀಗ ಚೇತರಿಸಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.
ಶುಕ್ರವಾರ(ನವೆಂಬರ್ 17)ದಂದು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಮತದಾನ ಪ್ರಾರಂಭಗೊಂಡಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.