ಔಷಧಿ, ಸಿಬ್ಬಂದಿಗಳ ಕೊರತೆಯಿಂದ ನಡೆಯುವ ಸಾವುಗಳನ್ನು ಸಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್
ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಸರಣಿ ಸಾವುಗಳ ಬಗ್ಗೆ ಹೈಕೋರ್ಟ್ ಅಸಮಾಧಾನ

ಮಹಾರಾಷ್ಟ್ರದ ನಾಂದೇಡ್ ಸರ್ಕಾರಿ ಆಸ್ಪತ್ರೆ (PTI)
ಮುಂಬೈ: ಮಹಾರಾಷ್ಟ್ರದ ನಾಂದೇಡ್ ಮತ್ತು ಛತ್ರಪತಿ ಸಂಭಾಜಿ ನಗರ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಭವಿಸಿದ ಸರಣಿ ಸಾವುಗಳ ಕುರಿತು ಬಾಂಬೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಿಬ್ಬಂದಿ ಕೊರತೆಯಿಂದ ನಡೆಯುವ ಸಾವುಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ಆರಿಫ್ ಡಾಕ್ಟರ್ ಅವರ ವಿಭಾಗೀಯ ಪೀಠವು ಈ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ್ದು, ಸಿಬ್ಬಂದಿ ಮತ್ತು ಔಷಧಿಗಳ ಕೊರತೆಯಿಂದ ಸಾವುಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಮೋಹಿತ್ ಖನ್ನಾ ಎಂಬ ವಕೀಲರು ಈ ವಿಷಯವನ್ನು ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ನ್ಯಾಯಾಲಯಕ್ಕೆ ಪತ್ರ ಬರೆದಿದ್ದರು.
ನಾಂದೇಡ್ನ ಶಂಕರರಾವ್ ಚವ್ಹಾಣ್ ಸರ್ಕಾರಿ ಆಸ್ಪತ್ರೆಯಲ್ಲಿ ಮೂರು ದಿನಗಳಲ್ಲಿ 16 ಮಕ್ಕಳು ಸೇರಿದಂತೆ 31 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಖನ್ನಾ ನ್ಯಾಯಾಲಯದ ಗಮನಕ್ಕೆ ತಂದಿದ್ದರು.
ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ, ಖಾಲಿ ಹುದ್ದೆಗಳು, ಔಷಧಿಗಳ ಲಭ್ಯತೆ ಮತ್ತು ಆಸ್ಪತ್ರೆಯಲ್ಲಿ ಸರ್ಕಾರ ಮಾಡಿದ ವೆಚ್ಚದ ಪ್ರಮಾಣದ ಬಗ್ಗೆ ಡೇಟಾವನ್ನು ಸಂಗ್ರಹಿಸಲು ಅಡ್ವೊಕೇಟ್ ಜನರಲ್ ಬೀರೇಂದ್ರ ಸರಾಫ್ ಅವರಿಗೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಶುಕ್ರವಾರ ನಡೆಯಲಿದೆ.







