ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ: ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದ ಸುಲ್ತಾನ್ ಪುರ್ ನ್ಯಾಯಾಲಯ
ಅಮಿತ್ ಶಾ / ರಾಹುಲ್ ಗಾಂಧಿ (PTI)
ಸುಲ್ತಾನ್ ಪುರ್ (ಉತ್ತರ ಪ್ರದೇಶ): ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ 2018ರಲ್ಲಿ ದಾಖಲಾಗಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲ್ತಾನ್ ಪುರ್ ಸಂಸದ-ಶಾಸಕ ನ್ಯಾಯಾಲಯವು ಅವರಿಗೆ ಸಮನ್ಸ್ ಜಾರಿಗೊಳಿಸಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.
ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಸಂಸದ-ಶಾಸಕ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್ ಯಾದವ್, ಡಿಸೆಂಬರ್ 16ರಂದು ನ್ಯಾಯಾಲಯದೆದುರು ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ ಎಂದು ವಕೀಲ ಸಂತೋಷ್ ಪಾಂಡೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದಿದ್ದ ಪತ್ರಿಕಾ ಗೋಷ್ಠಿಯೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಎಂಬವರು 2018ರಲ್ಲಿ ಅವರ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಿದ್ದರು.
ಪ್ರಾಮಾಣಿಕ ಹಾಗೂ ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಹೊಂದಿದ್ದೇನೆ ಎಂದು ಹೇಳುವ ಬಿಜೆಪಿಗೆ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯೊಬ್ಬ ಅಧ್ಯಕ್ಷರಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ದೂರುದಾರರು ಮಾನಹಾನಿ ಪ್ರಕರಣ ದಾಖಲಿಸಿದ್ದರು. ರಾಹುಲ್ ಗಾಂಧಿ ಆ ಹೇಳಿಕೆ ನೀಡಿದ್ದಾಗ, ಅಮಿತ್ ಶಾ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.
ರಾಹುಲ್ ಗಾಂಧಿ ಆ ಹೇಳಿಕೆ ನೀಡುವುದಕ್ಕೂ ನಾಲ್ಕು ವರ್ಷಗಳ ಹಿಂದೆಯೇ ಮುಂಬೈನ ಸಿಬಿಐ ನ್ಯಾಯಾಲಯವು ಅಮಿತ್ ಶಾ ಅವರನ್ನು ಕೊಲೆ ಆರೋಪದಿಂದ ಆರೋಪಮುಕ್ತಗೊಳಿಸಿತ್ತು. ಇದಕ್ಕೂ ಮುನ್ನ, 2005ರಲ್ಲಿ ನಡೆದಿದ್ದ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಆಗ ಗುಜರಾತ್ ರಾಜ್ಯದ ಗೃಹ ಸಚಿವರಾಗಿದ್ದ ಅಮಿತ್ ಶಾ ಪಾತ್ರವಿದೆ ಎಂಬ ಆರೋಪದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.