ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳಲ್ಲೂ ಎಸ್ಐಆರ್ ಬಗ್ಗೆ ಶೀಘ್ರದಲ್ಲೇ ನಿರ್ಧಾರ : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

ಹೊಸದಿಲ್ಲಿ : "ಮತ ಕಳ್ಳತನ" ಆರೋಪಗಳನ್ನು ಮಾಡಿರುವವರ ಉದ್ದೇಶಗಳು ಮತದಾರರಿಗೆ ತಿಳಿದಿವೆ. ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಎಸ್ಐಆರ್ ಬಗ್ಗೆ ಚುನಾವಣಾ ಆಯೋಗ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
"ಮತ ಕಳ್ಳತನ" ಕುರಿತು ರಾಹುಲ್ ಗಾಂಧಿಯ ಆರೋಪಗಳ ಬಗ್ಗೆ ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೋರ್ವ ನಾಗರಿಕನು ಮತದಾರರಾಗಿ ನೋಂದಾಯಿಸಿಕೊಳ್ಳುವುದು ಮಾತ್ರವಲ್ಲದೆ ತಮ್ಮ ಮತದಾನದ ಹಕ್ಕನ್ನು ಸಹ ಚಲಾಯಿಸಬೇಕು. ಎಲ್ಲಾ ರಾಜಕೀಯ ಪಕ್ಷಗಳನ್ನು ಆಯೋಗವು ಸಮಾನವಾಗಿ ಪರಿಗಣಿಸುತ್ತದೆ. ಪ್ರತಿಯೊಂದು ರಾಜಕೀಯ ಪಕ್ಷವು ಚುನಾವಣಾ ಆಯೋಗದಲ್ಲಿ ನೋಂದಣಿ ಮಾಡಿಕೊಳ್ಳುತ್ತದೆ. ಚುನಾವಣಾ ಆಯೋಗವು ಅವರ ನಡುವೆ ಹೇಗೆ ತಾರತಮ್ಯ ಮಾಡಬಹುದು? ಚುನಾವಣಾ ಆಯೋಗಕ್ಕೆ ಎಲ್ಲರೂ ಸಮಾನರು. ಆಯೋಗವು ತನ್ನ ಸಾಂವಿಧಾನಿಕ ಕರ್ತವ್ಯದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.
2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಪ್ರಮಾಣದಲ್ಲಿ ಮತಗಳ್ಳತನ ನಡೆದಿದ್ದು, 6.5 ಲಕ್ಷ ಮತಗಳ ಪೈಕಿ 1 ಲಕ್ಷಕ್ಕೂ ಅಧಿಕ ಮತ ಕಳ್ಳತನ ನಡೆದಿದೆಯೆಂದು ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು.





