ಉತ್ತರ ಪ್ರದೇಶ | ಗೊಂಡಾದಲ್ಲಿ ಭೀಕರ ರಸ್ತೆ ಅಪಘಾತ: ಕಾರು ಕಾಲುವೆಗೆ ಉರುಳಿ 11 ಮಂದಿ ಮೃತ್ಯು

Photo credit: PTI
ಗೊಂಡಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ರವಿವಾರ ಬೆಳಗ್ಗೆ ಕಾರೊಂದು ಕಾಲುವೆಗೆ ಉರುಳಿ ಬಿದ್ದು 11 ಮಂದಿ ಮೃತಪಟ್ಟ ಘಟನೆ ನಡೆದಿದೆ.
15 ಜನರು ಪ್ರಯಾಣಿಸುತ್ತಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಾಲುವೆಗೆ ಉರುಳಿದ ಪರಿಣಾಮ ಈ ಘಟನೆ ಸಂಭವಿಸಿದೆ.
ಅಪಘಾತದ ಸಂದರ್ಭದಲ್ಲಿ, ಪ್ರಯಾಣಿಕರು ಹತ್ತಿರದ ದೇವಾಲಯಕ್ಕೆ ಭೇಟಿ ನೀಡಿದ ನಂತರ ಮನೆಗೆ ಹಿಂತಿರುಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಕೂಡಲೇ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಿದರು. ಮೂವರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು, "ಗೊಂಡಾ ಜಿಲ್ಲೆಯಲ್ಲಿ ನಡೆದ ಘಟನೆ ಅತ್ಯಂತ ಹೃದಯವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ" ಎಂದು ತಿಳಿಸಿದ್ದಾರೆ.
ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ಒದಗಿಸಲು ಹಾಗೂ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳು ಲಭ್ಯವಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.





