"ಎಲ್ಲರೂ ಪತ್ರಿಕೆಗಳಲ್ಲಿ ಹೆಸರು ಬರಬೇಕೆಂದು ಬಯಸುತ್ತಾರೆ": ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಹೊಸ ಅರ್ಜಿಗಳ ಪರಿಗಣನೆಗೆ ಸುಪ್ರೀಂ ಕೋರ್ಟ್ ನಕಾರ

Photo credit: PTI
ಹೊಸದಿಲ್ಲಿ: ವಕ್ಫ್ ತಿದ್ದುಪಡಿ ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ ಹೊಸ ಅರ್ಜಿಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಪತ್ರಿಕೆಗಳಲ್ಲಿ ಹೆಸರು ಬರಬೇಕೆಂದು ಎಲ್ಲರೂ ಬಯಸುತ್ತಾರೆ ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದೆ.
ಶುಕ್ರವಾರ ಅರ್ಜಿ ವಿಚಾರಣೆ ವೇಳೆ ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ನಿರಂತರ ಅರ್ಜಿ ಸಲ್ಲಿಕೆ ಸಾಧ್ಯವಿಲ್ಲ ಎಂದು ಹೇಳಿದರು.
ಅರ್ಜಿದಾರರ ಪರವಾಗಿ ಹಾಜರಾದ ವಕೀಲರು, ಎಪ್ರಿಲ್ 8ರಂದು ಅರ್ಜಿ ಸಲ್ಲಿಸಲಾಗಿದೆ. ಎಪ್ರಿಲ್ 15ರಂದು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಹೇಳಿದ ದೋಷಗಳನ್ನು ತೆಗೆದುಹಾಕಲಾಗಿದೆ. ಆದರೆ, ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿಲ್ಲ ಎಂದು ಹೇಳಿದರು.
ಈ ವೇಳೆ ʼಪ್ರತಿಯೊಬ್ಬರೂ ತಮ್ಮ ಹೆಸರು ಪತ್ರಿಕೆಗಳಲ್ಲಿ ಬರಬೇಕೆಂದು ಬಯಸುತ್ತಾರೆʼ ಎಂದು ಸಿಜೆಐ ಹೇಳಿದರು.





