ಅಬಕಾರಿ ನೀತಿ ಹಗರಣ: ಸಿಬಿಐ ಪ್ರಕರಣದಲ್ಲಿ ಮನೀಷ ಸಿಸೋಡಿಯಾಗೆ ಜು.15ರವರೆಗೆ ನ್ಯಾಯಾಂಗ ಬಂಧನ

ಮನೀಷ ಸಿಸೋಡಿಯಾ | PC : PTI
ಹೊಸದಿಲ್ಲಿ: ರದ್ದುಗೊಳಿಸಲಾಗಿರುವ ದಿಲ್ಲಿ ಅಬಕಾರಿ ನೀತಿಯಲ್ಲಿ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾರ ನ್ಯಾಯಾಂಗ ಬಂಧನವನ್ನು ಇಲ್ಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಜು.15ರವರೆಗೆ ವಿಸ್ತರಿಸಿ ಆದೇಶಿಸಿದೆ.
ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸಿಸೋಡಿಯಾರನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಬಿಐ ಕಳೆದ ವರ್ಷದ ಫೆ.26ರಂದು ಸಿಸೋಡಿಯಾರನ್ನು ಬಂಧಿಸಿದ್ದು,ಫೆ.28ರಂದು ಅವರು ದಿಲ್ಲಿ ಸಂಪುಟಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು.
ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿಯೂ ಸಿಸೋದಿಯಾ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ಜು.25ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಬಿಆರ್ಎಸ್ ನಾಯಕಿ ಕೆ.ಕವಿತಾ ಅವರನ್ನೂ ಬಂಧಿಸಲಾಗಿದೆ.





