ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ದಿಲೀಪ್ ಘೋಷ್ ವಿರುದ್ಧ ಎಫ್ಐಆರ್ ದಾಖಲು

ದಿಲೀಪ್ ಘೋಷ್, ಮಮತಾ ಬ್ಯಾನರ್ಜಿ | Photo; PTI
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ದಿಲೀಪ್ ಘೋಷ್ ವಿರುದ್ಧ ದುರ್ಗಾಪುರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಗುರುವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದುರ್ಗಾಪುರ್ ನ್ಯಾಯಾಲಯದಲ್ಲಿನ ವಕೀಲ ಹಾಗೂ ಮತ್ತೊಬ್ಬ ವ್ಯಕ್ತಿಯು ನೀಡಿದ್ದ ದೂರನ್ನು ಆಧರಿಸಿ ಈ ಪ್ರಾಥಮಿಕ ಮಾಹಿತಿ ವರದಿಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.
ದಿಲೀಪ್ ಘೋಷ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿ ಭಂಗ ಉಂಟು ಮಾಡಲು ಉದ್ದೇಶಪೂರ್ವಕ ಅವಮಾನ) ಹಾಗೂ ಸೆಕ್ಷನ್ 509 (ಮಹಿಳೆಯ ಘನತೆಗೆ ಕುಂದುಂಟು ಮಾಡುವ ಉದ್ದೇಶದ ಹೇಳಿಕೆ) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದಕ್ಕೂ ಮುನ್ನ, ಮಮತಾ ಬ್ಯಾನರ್ಜಿ ತಮ್ಮ ತಂದೆ ಯಾರೆಂದು ಮೊದಲು ನಿರ್ಧರಿಸಬೇಕು ಎಂದು ದಿಲೀಪ್ ಘೋಷ್ ಹೇಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಾಮಗಳಲ್ಲಿ ವೈರಲ್ ಆಗಿತ್ತು. ಅಲ್ಲದೇ ಘೋಷ್ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.





