ಕರ್ನಲ್ ಸೋಫಿಯಾ ಕುರೇಶಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಮಧ್ಯಪ್ರದೇಶ ಸಚಿವನ ವಿರುದ್ಧ ಎಫ್ಐಆರ್ ದಾಖಲು

ಕುನ್ವರ್ ವಿಜಯ್ ಶಾ (Photo credit: ANI)
ಭೋಪಾಲ್: ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಕುರೇಶಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಮಧ್ಯಪ್ರದೇಶ ಸಚಿವ ಹಾಗೂ ಬಿಜೆಪಿ ಮುಖಂಡ ಕುನ್ವರ್ ವಿಜಯ್ ಶಾ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್ ಆದೇಶದಂತೆ ಎಫ್ಐಆರ್ ದಾಖಲಾಗಿದೆ.
ಕರ್ನಲ್ ಸೋಫಿಯಾ ಕುರೇಶಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಸಚಿವ ಕುನ್ವರ್ ವಿಜಯ್ ಶಾ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಬುಧವಾರ ಮಧ್ಯಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶದನ್ವಯ ಇಂದೋರ್ನ ಮನ್ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಹಿತಿಕಾ ತಿಳಿಸಿದ್ದಾರೆ.
ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆಯುಂಟು ಮಾಡುವುದು, ಎರಡು ಸಮುದಾಯಗಳ ನಡುವೆ ಕೋಮು ಭಾವನೆ ಕೆರಳಿಸುವುದು ಹಾಗೂ ಸಾರ್ವಜನಿಕ ಶಾಂತಿಗೆ ಭಂಗವುಂಟು ಮಾಡಿದ ಆರೋಪದ ಮೇಲೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152, 197 (1) (ಸಿ) ಮತ್ತು 196 (1) (ಬಿ) ಅಡಿ ಪ್ರಕರಣ ದಾಖಲಾಗಿದೆ.





