ಸ್ಯಾನ್ ಫ್ರಾನ್ಸಿಸ್ಕೋ ನಿಂದ ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ
ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿ ತಪಾಸಣೆ

Photo: NDTV
ಕೋಲ್ಕತ್ತಾ: ಸ್ಯಾನ್ ಫ್ರಾನ್ಸಿಸ್ಕೋದಿಂದ ಕೋಲ್ಕತ್ತಾ ಮೂಲಕ ಮುಂಬೈಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದರಿಂದ, ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮುಂಜಾನೆ ಪ್ರಯಾಣಿಕರನ್ನು ಕೆಳಗಿಳಿಸಿ ತಪಾಸಣೆ ನಡೆಸಲಾಯಿತು.
ವಿಮಾನಕ್ಕೆ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಗದಿತ ನಿಲುಗಡೆ ಇತ್ತು. ಈ ವೇಳೆ ತಾಂತ್ರಿಕ ದೋಷ ಕಂಡು ಬಂತು. ವಿಮಾನದ ಎಡ ಎಂಜಿನ್ನಲ್ಲಿ ತಾಂತ್ರಿಕ ದೋಷವಿರುವುದು ಪತ್ತೆಯಾಯಿತು. ಇದರಿಂದಾಗಿ ಕೋಲ್ಕತ್ತಾದಿಂದ ಮುಂಬೈಗೆ ಟೇಕ್ ಆಫ್ ಆಗುವುದು ವಿಳಂಬವಾಯಿತು ಎಂದು ಪಿಟಿಐ ವರದಿ ಮಾಡಿದೆ.
ಏರ್ ಇಂಡಿಯಾ ವಿಮಾನ AI180 ವೇಳಾಪಟ್ಟಿಯ ಪ್ರಕಾರ ಸ್ಯಾನ್ ಫ್ರಾನ್ಸಿಸ್ಕೋ ವಿಮಾನ ನಿಲ್ದಾಣದಿಂದ ಹೊರಟಿತು. ಬೆಳಗಿನ ಜಾವ 12:45 ಕ್ಕೆ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ, ಎಡ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಂಡುಬಂತು. ವಿಮಾನವನ್ನು ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ನಿಲ್ದಾಣದಲ್ಲಿ ನಿಲ್ಲಿಸಲಾಯಿತು.
ಸುರಕ್ಷತೆಯ ಹಿತದೃಷ್ಟಿಯಿಂದ ಬೆಳಿಗ್ಗೆ 5:20 ಕ್ಕೆ, ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಘೋಷಣೆ ಮಾಡಲಾಯಿತು. ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂದು ಕ್ಯಾಪ್ಟನ್ ಪ್ರಯಾಣಿಕರಿಗೆ ತಿಳಿಸಿದರು ಎಂದು ಪಿಟಿಐ ವರದಿ ಮಾಡಿದೆ.
ಏರ್ ಇಂಡಿಯಾ ವಿಮಾನವು ಕೋಲ್ಕತ್ತಾ ವಿಮಾನ ನಿಲ್ದಾಣದ ಟಾರ್ಮ್ಯಾಕ್ನಲ್ಲಿ ನಿಂತಿರುವುದು, ಗ್ರೌಂಡ್ ಸ್ಟಾಫ್ ವಿಮಾನದ ಎಡ ಇಂಜಿನ್ ಪರಿಶೀಲಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI-171, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿದ ಐದು ದಿನಗಳ ನಂತರ ಈ ಘಟನೆ ಸಂಭವಿಸಿದೆ.







