ಹಿಮಾಚಲ ಪ್ರದೇಶ | 24 ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ; ಸರಕಾರಿ ಶಾಲೆಯ ಶಿಕ್ಷಕನ ಬಂಧನ

ಸಾಂದರ್ಭಿಕ ಚಿತ್ರ | PC : freepik.com
ಹೊಸದಿಲ್ಲಿ: ಹಿಮಾಚಲಪ್ರದೇಶದ ಸಿರ್ಮೌರ್ ಜಿಲ್ಲೆಯ ಸರಕಾರಿ ಶಾಲೆಯೊಂದರಲ್ಲಿ 24 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿಕ್ಷಕನೋರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಲೈಂಗಿಕ ಕಿರುಕುಳದ ಕುರಿತು 8ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿತ್ತು.
ಶಿಕ್ಷಕ ತಮ್ಮನ್ನು ಅನುಚಿತವಾಗಿ ಸ್ಪರ್ಶಿಸುತ್ತಾನೆ ಎಂದು ಆರೋಪಿಸಿ 24 ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಶುಕ್ರವಾರ ಲಿಖಿತವಾಗಿ ದೂರು ನೀಡಿದ್ದರು. ಈ ದೂರನ್ನು ಅನಂತರ ಶಾಲೆಯ ಲೈಂಗಿಕ ಕಿರುಕುಳ ವಿರೋಧಿ ಸಮಿತಿಗೆ ವರ್ಗಾಯಿಸಲಾಗಿತ್ತು ಎಂದು ಶಾಲೆಯ ಆಡಳಿತ ಮಂಡಳಿ ತಿಳಿಸಿದೆ.
ಶನಿವಾರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ತಮ್ಮ ಮಕ್ಕಳು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ಹೆಚ್ಚಿನ ಪೋಷಕರಿಗೆ ಅರಿವಿಲ್ಲ ಎಂದು ತಿಳಿದು ಬಂತು ಎಂದು ಅವರು ತಿಳಿಸಿದ್ದಾರೆ.
ಶಿಕ್ಷಕನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75 ಹಾಗೂ ಪೊಕ್ಸೊದ ಸಂಬಂಧಿತ ನಿಯಮಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





