ಇಂಡಿಯಾ ಮೈತ್ರಿಕೂಟ ಕನಿಷ್ಠವೆಂದರೂ 295 ಸ್ಥಾನಗಳನ್ನು ಗೆಲ್ಲಲಿದೆ: ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ

Photo : ಮಲ್ಲಿಕಾರ್ಜುನ ಖರ್ಗೆ (PTI)
ಹೊಸ ದಿಲ್ಲಿ: ಇಂಡಿಯಾ ಮೈತ್ರಿಕೂಟ ಕನಿಷ್ಠವೆಂದರೂ 295 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಮ್ಮ ನಿವಾಸದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆಯ ನಂತರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಖರ್ಗೆ ಮಾತನಾಡುತ್ತಿದ್ದರು.
ಕೊನೆಯ ಹಂತದ ಮತದಾನದ ನಂತರ ಚುನಾವಣೆಯ ಕುರಿತು ಪರಾಮರ್ಶೆ ನಡೆಸಲು ಹಾಗೂ ಭವಿಷ್ಯದಲ್ಲಿನ ಕಾರ್ಯತಂತ್ರದ ಕುರಿತು ಚರ್ಚಿಸಲು ಇಂಡಿಯಾ ಮೈತ್ರಿಕೂಟದ ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದರು.
ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ತಾವು ಮತದಾನೋತ್ತರ ಸಮೀಕ್ಷೆಯ ಚರ್ಚೆಗಳಲ್ಲಿ ಭಾಗವಹಿಸುವುದಾಗಿ ಇಂಡಿಯಾ ಮೈತ್ರಿಕೂಟದ ನಾಯಕರು ಪ್ರಕಟಿಸಿದ್ದಾರೆ. ಇದಕ್ಕೂ ಮುನ್ನ, ತಾನು ಮತದಾನೋತ್ತರ ಸಮೀಕ್ಷೆಯ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್ ಘೋಷಿಸಿತ್ತು.





