ಜು. 14ರಂದು ಇಂದೋರ್ ವ್ಯಂಗ್ಯಚಿತ್ರಕಾರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

ಸುಪ್ರೀಂ ಕೋರ್ಟ್ | PTI
ಹೊಸದಿಲ್ಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತ ವ್ಯಂಗ್ಯಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರುವುದಕ್ಕಾಗಿ ತನ್ನ ವಿರುದ್ಧ ದಾಖಲಾದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಇಂದೋರ್ ನ ವ್ಯಂಗ್ಯಚಿತ್ರಕಾರ ಹೇಮಂತ್ ಮಾಳವೀಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ.
ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸುವಂತೆ ಕೋರಿ ಶುಕ್ರವಾರ ನ್ಯಾಯಮೂರ್ತಿಗಳಾದ ಸುಧಾಂಶು ದುಲಿಯ ಮತ್ತು ಜೋಯ್ ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠಕ್ಕೆ ಮನವಿ ಮಾಡಲಾಗಿತ್ತು.
ಮಾಳವೀಯರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್ ಜುಲೈ 3ರಂದು ತಿರಸ್ಕರಿಸಿದೆ ಹಾಗೂ ‘‘ಆಕ್ಷೇಪಾರ್ಹ ವ್ಯಂಗ್ಯಚಿತ್ರಗಳನ್ನು ಹಾಕುವ ಮೂಲಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಿತಿಯನ್ನು ದಾಟಿರುವುದಕ್ಕಾಗಿ’’ ಅವರನ್ನು ಖಂಡಿಸಿದೆ ಎಂದು ಅರ್ಜಿದಾರರ ಪರವಾಗಿ ಹಾಜರಾದ ವಕೀಲೆ ವೃಂದಾ ಗ್ರೋವರ್ ಹೇಳಿದರು.
ವಿವಾದಿತ ವ್ಯಂಗ್ಯಚಿತ್ರಗಳು 2021ರದ್ದು ಹಾಗೂ ಆರೆಸ್ಸೆಸ್ ಕಾರ್ಯಕರ್ತ ಹಾಗೂ ವಕೀಲ ವಿನಯ ಜೋಶಿ ಈ ವರ್ಷದ ಮೇ ತಿಂಗಳಲ್ಲಿ ಸಲ್ಲಿಸಿದ ದೂರಿನ ಆಧಾರದಲ್ಲಿ ಮಾಳವೀಯರನ್ನು ಬಂಧಿಸಲು ಉದ್ದೇಶಿಸಲಾಗಿದೆ ಎಂದು ಅವರು ನುಡಿದರು.







