ಹಣ ಅಕ್ರಮ ವರ್ಗಾವಣೆ ಪ್ರಕರಣ: ಆಪ್ ನಾಯಕ ಅಮಾನತುಲ್ಲಾ ಖಾನ್ ಗೆ ದಿಲ್ಲಿ ಹೈಕೋರ್ಟ್ ನೋಟಿಸ್

Photo credit: PTI
ಹೊಸದಿಲ್ಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಆಮ್ ಆದ್ಮಿ ಪಕ್ಷದ ನಾಯಕ ಅಮಾನತುಲ್ಲಾ ಖಾನ್ ಅವರ ವಿರುದ್ಧ ದಿಲ್ಲಿ ಉಚ್ಛ ನ್ಯಾಯಾಲಯ ನೋಟಿಸು ಜಾರಿ ಮಾಡಿದೆ.
ಈ ಪ್ರಕರಣದಲ್ಲಿ ಖಾನ್ ಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನನ್ನು ಜಾರಿ ನಿರ್ದೇಶನಾಲಯ ದಿಲ್ಲಿ ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಿದೆ.
ಖಾನ್ ಜಾಮೀನು ಹಾಗೂ ಅವರ ವಿರುದ್ಧದ ಆರೋಪ ಪಟ್ಟಿಯನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯ ನಿರಾಕರಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕಾಸ್ ಮಹಾಜಾನ್ ಅವರು ಖಾನ್ ಗೆ ನೋಟಿಸು ಜಾರಿ ಮಾಡಿದರು ಹಾಗೂ ಪ್ರಕರಣದ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿದರು.
ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಮುಗಿಯುವ ವರೆಗೆ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಕೂಡ ವಿಚಾರಣಾ ನ್ಯಾಯಾಲಯಕ್ಕೆ ಪೀಠ ನಿರ್ದೇಶನ ನೀಡಿತು.
ದಿಲ್ಲಿ ವಕ್ಫ್ ಮಂಡಳಿಯಲ್ಲಿ ಭ್ರಷ್ಟಾಚಾರದ ಆರೋಪವನ್ನು ಖಾನ್ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಖಾನ್ ಹಾಗೂ ಅವರ ಪತ್ನಿ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.





