ರಾಜಸ್ಥಾನ| ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ಬರೆ: ಮಾನವ ಹಕ್ಕುಗಳ ಆಯೋಗ ನೋಟಿಸ್

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ: ರಾಜಸ್ಥಾನದ ಬಾರ್ಮರ್ ಜಿಲ್ಲೆಯ ದೇವಾಲಯ ಸಂಕೀರ್ಣದೊಳಗಿನ ವಿದ್ಯಾರ್ಥಿ ನಿಲಯದಲ್ಲಿ ಕೆಲವು ವಿದ್ಯಾರ್ಥಿಗಳು ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿರುವುದನ್ನು ಕಂಡು ಸಿಟ್ಟಿಗೆದ್ದ ಶಿಕ್ಷಕರೊಬ್ಬರು, ಅವರಿಗೆ ಕಾದ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಅಮಾನುಷ ಕೃತ್ಯದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲೂ ಹರಿದಾಡಿದ್ದು, ಈ ಸುದ್ದಿಯ ವಿಷಯವು ನಿಜವಾಗಿದ್ದರೆ, ಮಾನವ ಹಕ್ಕುಗಳ ಉಲ್ಲಂಘನೆಯ ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕಳವಳ ವ್ಯಕ್ತಪಡಿಸಿದೆ.
ಹೀಗಾಗಿ, ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಬಾರ್ಮರ್ ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ಜಾರಿಗೊಳಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಸಂತ್ರಸ್ತ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸೇರಿದಂತೆ ಎರಡು ವಾರಗಳಲ್ಲಿ ವಿಸ್ತೃತ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.
ಈ ಘಟನೆಯಲ್ಲಿ ಗಾಯಗೊಂಡಿದ್ದ ಬಾಲಕರ ಪೈಕಿ, ಓರ್ವ ಬಾಲಕ ತನ್ನ ಮನೆಗೆ ತೆರಳಿ ಪೋಷಕರಿಗೆ ವಿಷಯ ತಿಳಿಸಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಗ್ರಾಮಸ್ಥರು ಈ ಕೃತ್ಯದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದೂ ಆಯೋಗ ಹೇಳಿದೆ.
ಮತ್ತೊಂದು ಪ್ರಕರಣದಲ್ಲಿ ಬಿಹಾರದ ಕತಿಯಾರ್ ಜಿಲ್ಲೆಯ ಹಫ್ಲಗಂಜ್ ಪ್ರದೇಶದ ಸರಕಾರಿ ಶಾಲೆಯೊಂದರ ಸುಮಾರು 18 ವಿದ್ಯಾರ್ಥಿಗಳನ್ನು ಶಿಕ್ಷಕರು ಕೊಠಡಿಯೊಂದರಲ್ಲಿ ಕೂಡಿಹಾಕಿ ದೈಹಿಕ ಶಿಕ್ಷೆ ನೀಡಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆಯೂ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ.







