ಬಿಹಾರ | ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದ ನಿತೀಶ್ ಕುಮಾರ್: ನಾಳೆ ನ.20ಕ್ಕೆ ಪ್ರಮಾಣ ವಚನ ಸಮಾರಂಭ

Photo : PTI
ಪಾಟ್ನಾ: ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ರನ್ನು ಬುಧವಾರ ಮಧ್ಯಾಹ್ನ ಭೇಟಿಯಾದ ನಿತೀಶ್ ಕುಮಾರ್, ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದರು. ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ 85 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಜೆಡಿಯು ಪಕ್ಷದ ನಾಯಕ ನಿತೀಶ್ ಕುಮಾರ್, ನಾಳೆ ಗುರುವಾರ ನ.20ರಂದು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ 22 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಪಾಟ್ನಾದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿರುವ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯಲ್ಲದೆ, ಬಿಜೆಪಿ ಆಡಳಿತಾರೂಢ ರಾಜ್ಯಗಳ ಮುಖ್ಯಮಂತ್ರಿಗಳೂ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ 22 ಮಂದಿ ಸಚಿವರ ಪೈಕಿ ಒಂಭತ್ತು ಮಂದಿ ಬಿಜೆಪಿ ಸದಸ್ಯರಿರಲಿದ್ದಾರೆ. ಈ ಪೈಕಿ, ಈ ಹಿಂದಿನ ಸರಕಾರದಲ್ಲಿ ಉಪ ಮುಖ್ಯಮಂತ್ರಿಗಳಾಗಿದ್ದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಕೂಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬಿಜೆಪಿಯಿಂದ ಪ್ರಮಾಣ ವಚನ ಸ್ವೀಕರಿಸಲಿರುವ ಒಂಭತ್ತು ಸಚಿವರ ಪೈಕಿ, ಎಂಟು ಸಚಿವರು ಈ ಹಿಂದಿನ ಸರಕಾರದಲ್ಲೂ ಸಚಿವರಾಗಿದ್ದರು.







