ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್ ಪಾತ್ರವನ್ನು ಪ್ರಶ್ನಿಸಿದ ಉವೈಸಿ

ಅಸದುದ್ದೀನ್ ಉವೈಸಿ, (File Photo: PTI)
ಛತ್ರಪತಿ ಸಂಭಾಜಿನಗರ: ಸ್ವಾತಂತ್ರ್ಯ ಹೋರಾಟದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಪಾತ್ರವನ್ನು ಪ್ರಶ್ನಿಸಿರುವ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಕೆ.ಬಿ. ಹೆಡ್ಗೇವಾರ್ ಅವರನ್ನು ಖಿಲಾಫತ್ ಚಳವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ ಜೈಲಿಗೆ ಹಾಕಲಾಗಿತ್ತೇ ಹೊರತು, ಬ್ರಿಟಿಷರ ಆಡಳಿತವನ್ನು ವಿರೋಧಿಸಿದ್ದಕ್ಕಾಗಿ ಅಲ್ಲ ಎಂದು ಹೇಳಿದ್ದಾರೆ.
ಜನವರಿ 15ರಂದು ನಡೆಯಲಿರುವ ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ಛತ್ರಪತಿ ಸಂಭಾಜಿನಗರದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಉವೈಸಿ, ಛತ್ರಪತಿ ಸಂಭಾಜಿನಗರದಲ್ಲಿ ಯಾವುದೇ ಬಾಂಗ್ಲಾದೇಶಿಗರ ಉಪಸ್ಥಿತಿಯಿಲ್ಲ ಎಂದು ಸ್ಪಷ್ಟಪಡಿಸಿದರು. ಒಂದು ವೇಳೆ ಈ ಪ್ರಾಂತ್ಯದಲ್ಲಿ ಬಾಂಗ್ಲಾದೇಶಿ ವಲಸಿಗರೇನಾದರೂ ಇದ್ದರೆ, ಅದು ನರೇಂದ್ರ ಮೋದಿ ಸರಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.
ಆಡಳಿತಾರೂಢ ಬಿಜೆಪಿ ಸರಕಾರವು ತನ್ನ ಹಿಂದುತ್ವ ಕಾರ್ಯಸೂಚಿಯನ್ನು ಪ್ರಚಾರ ಮಾಡಲು ಹಾಗೂ ಆಡಳಿತದ ವೈಫಲ್ಯದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಇಂತಹ ನಿರೂಪಣೆಗಳನ್ನು ಹರಡುತ್ತಿದೆ ಎಂದು ಅವರು ಆರೋಪಿಸಿದರು.
“ಬ್ರಿಟಿಷರ ವಿರುದ್ಧ ಹೋರಾಡಿದ ಕಾರಣಕ್ಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಯಾವುದೇ ನಾಯಕನನ್ನು ಜೈಲಿಗೆ ಹಾಕಿರುವ ನಿದರ್ಶನವಿದೆಯೇ?” ಎಂದು ಅವರು ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
“ಹೆಡ್ಗೇವಾರ್ ಅವರನ್ನು ಜೈಲಿಗೆ ಹಾಕಲಾಗಿತ್ತು ಎಂದು ಅವರು ಹೇಳುತ್ತಾರೆ. ಆದರೆ ಖಿಲಾಫತ್ ಚಳವಳಿಯನ್ನು ಬೆಂಬಲಿಸಿದ್ದಕ್ಕಾಗಿ ಅವರನ್ನು ಜೈಲಿಗೆ ಹಾಕಲಾಗಿತ್ತು. ಆದ್ದರಿಂದ ಅವರು ಮುಸ್ಲಿಮರ ವಿರುದ್ಧ ದ್ವೇಷದ ಮಾತುಗಳನ್ನು ಆಡುತ್ತಿದ್ದಾರೆ” ಎಂದು ಅವರು ವ್ಯಂಗ್ಯವಾಡಿದರು.







