ವಕ್ಫ್ ತಿದ್ದುಪಡಿ ಮಸೂದೆಯ ಮಾನ್ಯತೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ: ತುರ್ತು ವಿಚಾರಣೆಗೆ ಸಮ್ಮತಿ

Photo credit: PTI
ಹೊಸದಿಲ್ಲಿ: ವಕ್ಫ್ ತಿದ್ದುಪಡಿ ಕಾಯ್ದೆ, 2025ರ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ತುರ್ತು ವಿಚಾರಣೆ ನಡೆಸಲು ಸೋಮವಾರ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಅರ್ಜಿಗಳನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡಬೇಕು ಎಂದು ಜಮೀಯತ್-ಐ-ಹಿಂದ್ ಪರ ನ್ಯಾಯಾಲಯದಲ್ಲಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಮಾಡಿದ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠವು ಪರಿಗಣನೆಗೆ ತೆಗೆದುಕೊಂಡಿತು.
ಈ ಅರ್ಜಿಯೊಂದಿಗೆ ಇನ್ನೂ ಹಲವು ಅರ್ಜಿಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಕಪಿಲ್ ಸಿಬಲ್ ನ್ಯಾಯಾಲಯದ ಗಮನಕ್ಕೆ ತಂದರು. ಅದಕ್ಕೆ ಪ್ರತಿಯಾಗಿ, "ನಾನು ಮಧ್ಯಾಹ್ನ ಉಲ್ಲೇಖ ಪತ್ರವನ್ನು ಪರಿಶೀಲಿಸಿದ ನಂತರ, ನಿರ್ಧಾರ ಕೈಗೊಳ್ಳುತ್ತೇನೆ. ನಾವು ಈ ಅರ್ಜಿಯನ್ನು ಪಟ್ಟಿ ಮಾಡುತ್ತೇವೆ" ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಭರವಸೆ ನೀಡಿದರು.
ಲೋಕಸಭೆ ಹಾಗೂ ರಾಜ್ಯಸಭೆಗಳೆರಡರಲ್ಲೂ ಅಂಗೀಕಾರಗೊಂಡಿದ್ದ ವಕ್ಫ್ ತಿದ್ದುಪಡಿ ಮಸೂದೆಗೆ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದರು. ಈ ಕಾಯ್ದೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಮಸ್ತ ಕೇರಳ ಜಮಾಯತುಲ್ ಉಲೇಮಾ ಸೇರಿದಂತೆ ಹಲವು ಸಂಘಟನೆಗಳು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿವೆ.





