ನಕಲಿ,ಕಳಪೆ ಗುಣಮಟ್ಟದ ರಸಗೊಬ್ಬರಗಳ ಮಾರಾಟ ವಿರುದ್ಧ ಕಠಿಣ ಕ್ರಮ:ರಾಜ್ಯಗಳಿಗೆ ಕೇಂದ್ರದ ನಿರ್ದೇಶನ

ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಮಾರಾಟದ ವಿರುದ್ಧ ತಕ್ಷಣ ಕಠಿಣ ಕ್ರಮವನ್ನು ತೆಗೆದುಕೊಳ್ಳುವಂತೆ ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.
ಈ ಸಂಬಂಧ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ.
ದೇಶಾದ್ಯಂತ ನಕಲಿ ರಸಗೊಬ್ಬರಗಳ ಮಾರಾಟ,ಸಬ್ಸಿಡಿ ರಸಗೊಬ್ಬರಗಳ ಕಾಳಸಂತೆ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವುದು ಪತ್ರದ ಉದ್ದೇಶವಾಗಿದೆ.
ಕೃಷಿ ಭಾರತದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ರೈತರ ಆದಾಯದಲ್ಲಿ ಸ್ಥಿರತೆಯನ್ನು ಖಚಿತಪಡಿಸಲು ಅವರಿಗೆ ಸಕಾಲದಲ್ಲಿ ಮತ್ತು ಕೈಗೆಟಕುವ ಬೆಲೆಗಳಲ್ಲಿ ಗುಣಮಟ್ಟದ ರಸಗೊಬ್ಬರಗಳನ್ನು ಒದಗಿಸುವುದು ಅತ್ಯಗತ್ಯವಾಗಿದೆ ಎಂದು ಸಚಿವ ಚೌಹಾಣ ಹೇಳಿದ್ದಾರೆ.
ಅಗತ್ಯವಿರುವ ಸ್ಥಳಗಳಲ್ಲಿ ರಸಗೊಬ್ಬರಗಳ ಸಮರ್ಪಕ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ರಾಜ್ಯಗಳ ಹೊಣೆಗಾರಿಕೆಯಾಗಿದೆ ಎಂದು ತಿಳಿಸಿರುವ ಅವರು, ಪರವಾನಿಗೆಗಳ ರದ್ದತಿ ಮತ್ತು ಎಫ್ಐಆರ್ಗಳ ನೋಂದಣಿ ಸೇರಿದಂತೆ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದ್ದಾರೆ.
ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಸಮಸ್ಯೆಯನ್ನು ಬೇರುಸಹಿತ ಕಿತ್ತುಹಾಕಲು ರಾಜ್ಯವ್ಯಾಪಿ ಅಭಿಯಾನವನ್ನು ಆರಂಭಿಸುವಂತೆ ರಾಜ್ಯಗಳನ್ನು ಚೌಹಾಣ ಆಗ್ರಹಿಸಿದ್ದಾರೆ.







