"ನಿಯಮಗಳನ್ನು ರೂಪಿಸಿದರೂ ಜಾರಿಗೆ ತಂದಿಲ್ಲ": ಬೀದಿ ನಾಯಿಗಳ ಹಾವಳಿ ಪ್ರಕರಣದಲ್ಲಿ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ತರಾಟೆ

ಸಾಂದರ್ಭಿಕ ಚಿತ್ರ (Photo: PTI)
ಹೊಸದಿಲ್ಲಿ : ಬೀದಿ ನಾಯಿಗಳ ಹಾವಳಿ ತಡೆಯಲು ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ದಿಲ್ಲಿ ನಗರವನ್ನು ಬೀದಿನಾಯಿಗಳಿಂದ ಮುಕ್ತಗೊಳಿಸುವಂತೆ ಸೂಚಿಸಿದ ಆಗಸ್ಟ್ 11ರ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಗಳ ಕುರಿತ ಆದೇಶವನ್ನು ಕಾಯ್ದಿರಿಸಿದೆ.
ʼಸಂಸತ್ತು ನಿಯಮಗಳು ಮತ್ತು ಕಾನೂನುಗಳನ್ನು ರೂಪಿಸುತ್ತದೆ. ಆದರೆ, ಅವುಗಳು ಜಾರಿಗೆ ಬರುತ್ತಿಲ್ಲ. ಸ್ಥಳೀಯ ಅಧಿಕಾರಿಗಳು ಏನು ಮಾಡಬೇಕೋ ಅದನ್ನು ಮಾಡುತ್ತಿಲ್ಲ. ಅವರು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕುʼ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್ವಿ ಅಂಜಾರಿಯಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠ ಹೇಳಿದೆ.
ಆದರೆ, ಆಗಸ್ಟ್ 11 ರಂದು ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠವು ನಾಗರಿಕ ಸಂಸ್ಥೆಗಳಿಗೆ ಹೊರಡಿಸಿದ ನಿರ್ದೇಶನಗಳಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿಲ್ಲ.
ದಿಲ್ಲಿಯ ಎಲ್ಲಾ ಪ್ರದೇಶಗಳನ್ನು ಬೀದಿನಾಯಿ ಮುಕ್ತ ಮಾಡಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಈ ಮೊದಲು ಆದೇಶಿಸಿತ್ತು.
8 ವಾರಗಳ ಒಳಗೆ ಎಲ್ಲಾ ಬೀದಿ ನಾಯಿಗಳನ್ನು ವಸತಿ ಪ್ರದೇಶಗಳಿಂದ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಬೇಕು. ಇದಕ್ಕಾಗಿ ಒಂದು ಕಾರ್ಯಪಡೆ ರಚಿಸುವ ಅಗತ್ಯವಿದ್ದರೆ ಕೂಡಲೇ ಆ ಕೆಲಸ ಮಾಡಬೇಕು. ಈ ಪ್ರಕ್ರಿಯೆ ತಡೆಯುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿತ್ತು.







