ಇಸ್ಕಾನ್ ಶಾಲೆಗಳಲ್ಲಿ ಲೈಂಗಿಕ ದೌರ್ಜನ್ಯ ಆರೋಪ : ಅರ್ಜಿದಾರರಿಗೆ ಮಕ್ಕಳ ಹಕ್ಕುಗಳ ಆಯೋಗವನ್ನು ಸಂಪರ್ಕಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್

Photo credit: PTI
ಹೊಸದಿಲ್ಲಿ : ಇಸ್ಕಾನ್ ನಡೆಸುವ ಶಾಲೆಗಳಲ್ಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳ ಕುರಿತು ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಅರ್ಜಿದಾರರು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಆಯೋಗಗಳನ್ನು ಸಂಪರ್ಕಿಸುವಂತೆ ಸೂಚಿಸಿದೆ.
ಈ ಕುರಿತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿದೆ. "ಆಂತರಿಕ ದಾಖಲೆಗಳು ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಸುಳಿವುಗಳನ್ನು ನೀಡುತ್ತದೆ. ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಮಕ್ಕಳ ಹಕ್ಕುಗಳ ಆಯೋಗ ಕೂಡ ಈ ಹಿಂದೆ ಸಲ್ಲಿಸಿದ ಮನವಿಗಳಿಗೆ ಉತ್ತರಿಸಿಲ್ಲ" ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ಈ ವೇಳೆ ನ್ಯಾಯಮೂರ್ತಿ ನಾಗರತ್ನ ಅವರು ಅರ್ಜಿದಾರರಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ರಾಜ್ಯ ಆಯೋಗಗಳಿಗೆ ಮತ್ತೊಂದು ಮನವಿಯನ್ನು ಕಳುಹಿಸುವಂತೆ ಸೂಚಿಸಿದ್ದಾರೆ.





