"ಇಂತಹ ಹೇಳಿಕೆಗಳನ್ನು ನೀಡುವುದು ಓರ್ವ ಸಚಿವರಿಗೆ ಸೂಕ್ತವೇ?": ಸೋಫಿಯಾ ಕುರೇಶಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಸಚಿವನಿಗೆ ಸುಪ್ರೀಂ ಕೋರ್ಟ್ ತರಾಟೆ
ಮಧ್ಯಪ್ರವೇಶಿಸಲು ನಿರಾಕರಿಸಿದ ಸರ್ವೋಚ್ಚ ನ್ಯಾಯಾಲಯ

ಮಧ್ಯಪ್ರದೇಶದ ಸಚಿವ ಕನ್ವರ್ ವಿಜಯ್ ಶಾ ಮತ್ತು ಕರ್ನಲ್ ಸೋಫಿಯಾ ಖುರೇಷಿ (Photo credit : PTI, X/@KrVijayShah)
ಹೊಸದಿಲ್ಲಿ: ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಕುರೇಶಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಸಚಿವ ಕುನ್ವರ್ ವಿಜಯ್ ಶಾರನ್ನು ಗುರುವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಅವರ ವಿರುದ್ಧ ದಾಖಲಾಗಿರುವ ಎಫ್ಐಆರ್ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದೆ.
ಭಾರತೀಯ ಸೇನೆಯ ಯೋಧೆ ಕರ್ನಲ್ ಸೋಫಿಯಾ ಕುರೇಶಿ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ, ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಬುಧವಾರ ಮಧ್ಯಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಇಂದು (ಗುರುವಾರ) ಸಚಿವ ಕುನ್ವರ್ ವಿಜಯ್ ಶಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ನನ್ನ ಹೇಳಿಕೆಯನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ ಎಂದು ವಾದಿಸಿ, ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಮಧ್ಯಪ್ರದೇಶ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಬುಧವಾರ ತಡ ರಾತ್ರಿ ಸಚಿವ ಕುನ್ವರ್ ವಿಜಯ್ ಶಾ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕು ಎಂದು ಮಧ್ಯಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಸಚಿವ ಕುನ್ವರ್ ವಿಜಯ್ ಶಾ ಸಲ್ಲಿಸಿದ್ದ ತುರ್ತು ವಿಚಾರಣೆ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರನ್ನೊಳಗೊಂಡ ನ್ಯಾಯಪೀಠ, "ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಯೊಬ್ಬರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ನಿರೀಕ್ಷಿಸಲಾಗುತ್ತದೆ. ಅವರು ಎಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ? ಇಂತಹ ಹೇಳಿಕೆಗಳನ್ನು ನೀಡುವುದು ಓರ್ವ ಸಚಿವರಿಗೆ ಸೂಕ್ತವೇ?" ಎಂದು ಸಚಿವ ಕುನ್ವರ್ ವಿಜಯ್ ಶಾ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು.
ಇದಕ್ಕೆ ಪ್ರತಿಯಾಗಿ, "ಸಚಿವ ಕುನ್ವರ್ ವಿಜಯ್ ಶಾ ತಮ್ಮ ಹೇಳಿಕೆಗಾಗಿ ವಿಷಾದ ವ್ಯಕ್ತಪಡಿಸಿದ್ದು, ತಮ್ಮ ಕ್ಷಮೆಯನ್ನೂ ಕೋರಿದ್ದಾರೆ. ಆದರೆ, ಅವರ ಹೇಳಿಕೆಯನ್ನು ಮಾಧ್ಯಮಗಳು ತಿರುಚಿ, ಅತಿರೇಕಗೊಳಿಸಿವೆ. ಅವರು ತಮ್ಮ ಹೇಳಿಕೆಗಾಗಿ ಕ್ಷಮೆ ಕೋರಿದ್ದು, ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ" ಎಂದು ಸಚಿವ ಕುನ್ವರ್ ವಿಜಯ್ ಶಾ ಪರ ಹಾಜರಿದ್ದ ವಕೀಲರು ವಾದಿಸಿದರು.
ಆದರೆ, ʼಇಂತಹ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಹೇಳುವ ಪ್ರತಿ ವಾಕ್ಯವನ್ನೂ ಗಮನಿಸಲಾಗುತ್ತದೆ, ವಿಶೇಷವಾಗಿ, ದೇಶವು ಅತ್ಯಂತ ಸಂಕೀರ್ಣ ಪರಿಸ್ಥಿತಿಯನ್ನು ಹಾದು ಹೋಗುವಾಗ" ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅಸಮಾಧಾನ ವ್ಯಕ್ತಪಡಿಸಿದರು.
ಸಚಿವ ಕುನ್ವರ್ ವಿಜಯ್ ಶಾ ವಿರುದ್ಧ ದಾಖಲಾಗಿರುವ ಎಫ್ಐಆರ್ ಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತಾದರೂ, ಮೇ 16ರಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಲು ಸಮ್ಮತಿ ಸೂಚಿಸಿತು.







