"ಆಘಾತಕಾರಿ, ನಾಚಿಕೆಗೇಡು”: ಉಮರ್ ಖಾಲಿದ್, ಶರ್ಜಿಲ್ ಇಮಾಮ್ ಗೆ ಜಾಮೀನು ನಿರಾಕರಣೆ ಕುರಿತು ಪ್ರಶಾಂತ್ ಭೂಷಣ್ ಪ್ರತಿಕ್ರಿಯೆ

Photo : PTI
ಹೊಸದಿಲ್ಲಿ: 2020ರ ದಿಲ್ಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಉಮರ್ ಖಾಲಿದ್ ಮತ್ತು ಶರ್ಜಿಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ ತೀರ್ಪುನ್ನು ʼಆಘಾತಕಾರಿ, ನಾಚಿಕೆಗೇಡು ಮತ್ತು ಅನ್ಯಾಯʼ ಎಂದು ಸಾಮಾಜಿಕ ಹೋರಾಟಗಾರ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಶಾಂತ್ ಭೂಷಣ್, ಉಮರ್ ಖಾಲಿದ್ ಮತ್ತು ಶರ್ಜಿಲ್ ಇಮಾಮ್ ಅವರ ಮೇಲೆ ಹಿಂಸಾಚಾರದ ಆರೋಪ ಹೊರಿಸಲಾಗಿಲ್ಲ. ಬದಲಿಗೆ ಪಿತೂರಿಯ ಆರೋಪ ಮಾತ್ರ ಹೊರಿಸಲಾಗಿದೆ. ಅವರ ಭಾಷಣಗಳ ಹಲವಾರು ವೀಡಿಯೊಗಳಿವೆ. ಅದರಲ್ಲಿ ಅವರು ಹಿಂಸಾಚಾರದ ವಿರುದ್ಧ ಮಾತನಾಡುತ್ತಾರೆ. ಅವರು ವಿಚಾರಣೆಯಿಲ್ಲದೆ 5 ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಆದರೆ ಗುರುತುಗಳನ್ನು ಮರೆಮಾಡಲಾಗಿರುವ 'ರಕ್ಷಿತ ಸಾಕ್ಷಿಗಳ' ಪೊಲೀಸ್ ಹೇಳಿಕೆಗಳ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸುತ್ತದೆ. ಇದು ಅತ್ಯಂತ ನಾಚಿಕೆಗೇಡು. ಇದು ಬದುಕುವ ಹಕ್ಕು ಹಾಗೂ ಸ್ವಾತಂತ್ರ್ಯವನ್ನು ಅಣಕಿಸುತ್ತದೆ ಎಂದು ಹೇಳಿದ್ದಾರೆ.
ದಿಲ್ಲಿ ಗಲಭೆಗೆ ಸಂಬಂಧಿಸಿದ ಯುಎಪಿಎಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಸುಪ್ರೀಂ ಕೋರ್ಟ್ ಉಮರ್ ಖಾಲಿದ್ ಮತ್ತು ಶರ್ಜಿಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿತ್ತು. ಇತರ ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.





