ಅಗಸ್ಟಾ ವೆಸ್ಟ್ಲ್ಯಾಂಡ್ ಪ್ರಕರಣ; ಸುಪ್ರೀಂ ಕೋರ್ಟ್ನಿಂದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಜೇಮ್ಸ್ ಗೆ ಜಾಮೀನು

ಸುಪ್ರೀಂ ಕೋರ್ಟ್ | PC : PTI
ಹೊಸದಿಲ್ಲಿ: 3,600 ಕೋಟಿ ರೂ. ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಧ್ಯವರ್ತಿ ಹಾಗೂ ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮೈಕಲ್ ಜೇಮ್ಸ್ ಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ.
‘‘ನಾವು ಆರೋಪಿ, ದೂರುದಾರ (ಕ್ರಿಶ್ಚಿಯನ್ ಮೈಕಲ್)ನಿಗೆ ಈ ಹಂತದಲ್ಲಿ ಜಾಮೀನು ಮಂಜೂರು ಮಾಡಿದ್ದೇವೆ’’ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ಹೇಳಿದೆ.
ಜೇಮ್ಸ್ ಗೆ ಜಾಮೀನು ನೀಡುವಾಗ ಸುಪ್ರೀಂ ಕೋರ್ಟ್ ಈ ವಿಷಯದ ಕುರಿತು ಸಿಬಿಐ ತನಿಖೆ ನಡೆಯುತ್ತಿರುವಾಗಲೂ ಆರೋಪಿ ಕಳೆದ 6 ವರ್ಷಗಳಿಂದ ಕಸ್ಟಡಿಯಲ್ಲಿದ್ದರು ಎಂಬ ಸತ್ಯವನ್ನು ಪರಿಗಣಿಸಿತು.
ವಿಚಾರಣಾ ನ್ಯಾಯಾಲಯ ನಿರ್ಧರಿಸಿದ ಷರತ್ತುಗಳಿಗೆ ಒಳಪಟ್ಟು ಜೇಮ್ಸ್ ಜಾಮೀನಿನ ಮೇಲೆ ಬಿಡುಗಡೆಯಾಗಲಿದ್ದಾರೆ ಎಂದು ಸುಪ್ರೀ ಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ತನಗೆ ಜಾಮೀನು ನಿರಾಕರಿಸಿ ದಿಲ್ಲಿ ಉಚ್ಚ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ಜೇಮ್ಸ್ 2024 ಸೆಪ್ಟಂಬರ್ 25ರಂದು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.





