ಇಲ್ಲಿಗೆ ಬರಲು ನಿಮಗೆ ಎದೆಗಾರಿಕೆಯಿಲ್ಲವೇ? : ವಿಚಾರಣೆಗೆ ಗೈರಾದ ಸಿಬಿಐಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ | PC : PTI
ಹೊಸದಿಲ್ಲಿ: ಇಂಡಿಯಾ ಬುಲ್ಸ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ ದೂರೊಂದಕ್ಕೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಿದರೂ ಗೈರಾಗಿರುವುದನ್ನು ಸುಪ್ರೀಂ ಕೋರ್ಟ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
"ನಮಗೆ ನಿಮ್ಮ ವರ್ತನೆಯಿಂದ ಸಮಾಧಾನವಾಗಿಲ್ಲ. ನಾವು ಒಮ್ಮೆ ನೋಟಿಸ್ ಜಾರಿಗೊಳಿಸಿದ ನಂತರ ಅವರಿಲ್ಲಿ ಹಾಜರಾಗಬೇಕು. ನಾವು ಸುಪ್ರೀಂ ಕೋರ್ಟ್ ಎದುರು ಹಾಜರಾಗುವುದಿಲ್ಲ ಎಂದು ಅವರು ಹೇಗೆ ಹೇಳಲು ಸಾಧ್ಯ? ಇಲ್ಲಿಗೆ ಬರಲು ನಿಮಗೆ ಎದೆಗಾರಿಕೆಯಿಲ್ಲವೇ?" ಎಂದು ಸುಪ್ರೀಂ ಕೋರ್ಟ್ ಕಿಡಿ ಕಾರಿತು.
ಸದ್ಯ ಸನ್ಮಾನ್ ಕ್ಯಾಪಿಟಲ್ ಲಿಮಿಟೆಡ್ ಎಂದು ಮರು ನಾಮಕರಣಗೊಂಡಿರುವ ಇಂಡಿಯಾ ಬುಲ್ಸ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಕಂಪೆನಿಯ ಪ್ರವರ್ತಕ ಸಂಸ್ಥೆಯು ನಿಧಿಯನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಕುರಿತ ನ್ಯಾಯಾಲಯದ ಮೇಲುಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ವಜಾಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.







