ಕೇಂದ್ರ ಸಚಿವ ಎಲ್ ಮುರುಗನ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Photo | hindustantimes.com
ಹೊಸದಿಲ್ಲಿ: ಕೇಂದ್ರ ಸಚಿವ ಎಲ್ ಮುರುಗನ್ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.
2020ರ ಡಿಸೆಂಬರ್ ನಲ್ಲಿ ಪತ್ರಿಕಾಗೋಷ್ಠಿಯೊಂದರಲ್ಲಿ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆಂದು ಆರೋಪಿಸಿ ಚೆನ್ನೈ ಮೂಲದ ಮುರಸೋಲಿ ಟ್ರಸ್ಟ್ ಎಲ್ ಮುರುಗನ್ ವಿರುದ್ಧ ದೂರು ಸಲ್ಲಿಸಿತ್ತು.
ಎಲ್ ಮುರುಗನ್ ಹೇಳಿಕೆಯು ಟ್ರಸ್ಟ್ ಗೆ ಮಾನಹಾನಿ ಉಂಟು ಮಾಡುವ ಗುರಿಯನ್ನು ಹೊಂದಿರಲಿಲ್ಲ ಎಂದು ಮುರುಗನ್ ಪರ ವಕೀಲರು ಕೋರ್ಟ್ ಗಮನಕ್ಕೆ ತಂದಿದ್ದರು. ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿ ಆದೇಶವನ್ನು ನೀಡಿದ್ದು, ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ನಿರಾಕರಿಸಿದ ಮದ್ರಾಸ್ ಹೈಕೋರ್ಟ್ ನ 2023 ಸೆ.5ರ ಆದೇಶವನ್ನು ರದ್ದುಗೊಳಿಸಿದೆ.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಮುರುಗನ್ ಅವರು ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.





