ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸದೆ ವಿಳಂಬ : ಮಹಾರಾಷ್ಟ್ರ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ತನ್ನ ಆದೇಶವನ್ನು ಪಾಲಿಸದ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, 2022ರಿಂದ ಸ್ಥಗಿತಗೊಂಡಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಜನವರಿ 31, 2026ರೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ. ಈ ಆದೇಶವನ್ನು ಮತ್ತಷ್ಟು ಕಾಲ ವಿಸ್ತರಿಸಲು ಸಾಧ್ಯವಿಲ್ಲ ಎಂದೂ ಸ್ಪಷ್ಟಪಡಿಸಿದೆ.
ಸ್ಥಗಿತಗೊಂಡಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸಕಾಲದಲ್ಲಿ ನಡೆಸಬೇಕು ಎಂಬ ತನ್ನ ಆದೇಶವನ್ನು ಪಾಲಿಸದ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
“ಜನವರಿ 31, 2026ರೊಳಗೆ ಜಿಲ್ಲಾ ಪರಿಷತ್, ಪಂಚಾಯತ್ ಸಮಿತಿಗಳು ಹಾಗೂ ಎಲ್ಲ ಮಹಾನಗರ ಪಾಲಿಕೆಗಳು ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು. ಇನ್ನೂ ಹೆಚ್ಚಿನ ಕಾಲಾವಕಾಶವನ್ನು ರಾಜ್ಯ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ವಿಸ್ತರಿಸಲು ಸಾಧ್ಯವಿಲ್ಲ” ಎಂದು ನ್ಯಾ. ಸೂರ್ಯ ಕಾಂತ್ ಮತ್ತು ನ್ಯಾ. ಜೋಯ್ ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ಎಚ್ಚರಿಕೆ ನೀಡಿದೆ.





