ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಚುನಾವಣಾ ಆಯೋಗದ ನಿರ್ದೇಶನದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಮಹುವಾ ಮೊಯಿತ್ರಾ

ಮಹುವಾ ಮೊಯಿತ್ರಾ (Photo: PTI)
ಹೊಸದಿಲ್ಲಿ : ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಚುನಾವಣಾ ಆಯೋಗದ ನಿರ್ದೇಶನದ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಭಾರತದ ಸಂವಿಧಾನದ 14, 19(1)(a), 21, 325, 326 ನೇ ವಿಧಿಗಳು ಮತ್ತು 1950 ರ ಜನತಾ ಪ್ರಾತಿನಿಧ್ಯ (RP) ಕಾಯ್ದೆ ಮತ್ತು 1960ರ ಮತದಾರರ ನೋಂದಣಿ (RER) ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ. ಆದ್ದರಿಂದ ಜೂನ್ 24ರಂದು ಹೊರಡಿಸಿದ ಆದೇಶವನ್ನು ರದ್ದುಗೊಳಿಸುವಂತೆ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ವಿನಂತಿಸಲಾಗಿದೆ.
ಇದು ದೇಶದಲ್ಲಿ ಅರ್ಹ ಮತದಾರರ ದೊಡ್ಡ ಪ್ರಮಾಣದ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಕಾರಣವಾಗಬಹುದು. ದೇಶದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ದುರ್ಬಲಗೊಳಿಸಬಹುದು. ಆದ್ದರಿಂದ ದೇಶದ ಇತರ ರಾಜ್ಯಗಳಲ್ಲಿ ಕೂಡ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆದೇಶಗಳನ್ನು ಹೊರಡಿಸದಂತೆ ಭಾರತೀಯ ಚುನಾವಣಾ ಆಯೋಗವನ್ನು ತಡೆಯುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ದೇಶದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ಇಂತಹ ಪ್ರಕ್ರಿಯೆಯನ್ನು ನಡೆಸುತ್ತಿದೆ. ಮತದಾರರ ಪಟ್ಟಿಯಲ್ಲಿ ಈಗಾಗಲೇ ಹೆಸರುಗಳಿರುವ ಮತ್ತು ಹಲವು ಬಾರಿ ಮತ ಚಲಾಯಿಸಿರುವ ಮತದಾರರಿಗೆ ತಮ್ಮ ಅರ್ಹತೆಯನ್ನು ಸಾಬೀತುಪಡಿಸುವಂತೆ ಕೇಳಲಾಗುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.