ಉತ್ತರ ಪ್ರದೇಶ | ಕೈಸರ್ಗಂಜ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಬ್ರಿಜ್ ಭೂಷಣ್ ಶರಣ್ ಸಿಂಗ್ ಪುತ್ರ

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ | PC : NDTV
ಕೈಸರ್ಗಂಜ್ : ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಹಾಗೂ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರು ಕೈಸರ್ಗಂಜ್ ಲೋಕಸಭಾ ಕ್ಷೇತ್ರದಿಂದ 1.4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅವರು ಸಮಾಜವಾದಿ ಪಕ್ಷದ ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿ ಭಗತ್ ರಾಮ್ ವಿರುದ್ಧ 5,71,263 ಮತ ಗಳಿಸಿದರೆ, ಭಗತ್ ರಾಮ್ 4,22,420 ಮತಗಳನ್ನು ಗಳಿಸಲಷ್ಟೆ ಶಕ್ತರಾದರು.
ಕೈಸರ್ಗಂಜ್ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಟಿಕೆಟ್ ನಿರಾಕರಿಸಿದ್ದ ಬಿಜೆಪಿ, ಅವರ ಪುತ್ರ ಕರಣ್ ಭೂಷಣ್ ಸಿಂಗ್ಗೆ ಟಿಕೆಟ್ ನೀಡಿತ್ತು. ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸಿದ್ದ ಬ್ರಿಜ್ ಭೂಷಣ್ ವಿರುದ್ಧ ಆಕ್ರೋಶ ತೀವ್ರಗೊಂಡಿದ್ದರಿಂದ, ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು.
ಆದರೆ, ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿದ್ದ ಬ್ರಿಜ್ ಭೂಷಣ್ ಸಿಂಗ್ ಬದಲಿಗೆ ಅವರ ಪುತ್ರ ಕರಣ್ ಭೂಷಣ್ ಸಿಂಗ್ಗೆ ಬಿಜೆಪಿ ಟಿಕೆಟ್ ನೀಡಿದ ಕ್ರಮವನ್ನು ಖಂಡಿಸಿದ್ದ ಕಾಂಗ್ರೆಸ್, ಇದು ಅತ್ಯಂತ ಕೀಳು ಮಟ್ಟದ ರಾಜಕಾರಣ ಎಂದು ಟೀಕಿಸಿತ್ತು.





