ಉತ್ತರ ಕಾಶಿ ಸುರಂಗ ಕುಸಿತ: ಮುಂದುವರಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ
ಮಾಹಿತಿ ಪಡೆದ ಪ್ರಧಾನಿ ಮೋದಿ

Photo: PTI
ಡೆಹ್ರಾಡೂನ್: ಉತ್ತರ ಕಾಶಿಯಲ್ಲಿ ಸಂಭವಿಸಿರುವ ಸಿಲ್ಕ್ಯಾರ-ಬಾರ್ಕೋಟ್ ಸುರಂಗ ಕುಸಿತದ ಕುರಿತು ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರಿಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಘಟನಾ ಸ್ಥಳದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ಕುರಿತು ವಿವರ ಪಡೆದರು. ಸುರಂಗದೊಳಗೆ ಸಿಲುಕಿಕೊಂಡಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರಿಗೆ ಈ ಸಂಬಂಧ ಎರಡು ಬಾರಿ ಕರೆ ಮಾಡಿದ್ದ ಪ್ರಧಾನಿ ಮೋದಿ ಅವರಿಗೆ ವಿವಿಧ ರಾಜ್ಯ ಮತ್ತು ಕೇಂದ್ರ ಸಂಸ್ಥೆಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ ಎಂದು ಮಾಹಿತಿ ನೀಡಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇದಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡಾ ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರೊಂದಿಗೆ ಮಾತುಕತೆ ನಡೆಸಿದರು.
ಸುರಂಗದೊಳಗೆ ಸಿಲುಕಿಕೊಂಡಿರುವ ಎಲ್ಲ 40 ಮಂದಿ ಕಾರ್ಮಿಕರನ್ನು ಮಂಗಳವಾರ ಸಂಜೆಯೊಳಗೆ ರಕ್ಷಿಸುವ ನಿರೀಕ್ಷೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರ್ಪಣ್ ಯದುವಂಶಿ ANI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. 900 ಮಿಮೀ ಸುತ್ತಳತೆಯ ಕೊಳವೆಗಳನ್ನು ಹೊಂದಿರುವ ಟ್ರಕ್ ಗಳು ಸಿಲ್ಕ್ಯಾರ ಬಳಿಗೆ ತಲುಪಿದ್ದು, ಸುರಂಗದಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದೆ.







