×
Ad

ಜ. 21ರಂದು ಕಾಂಗ್ರೆಸ್‌ ರಾಜ್ಯಮಟ್ಟದ ಸಮಾವೇಶ

Update: 2024-01-12 20:48 IST

ಮಂಗಳೂರಿನಲ್ಲಿ ಜ.21ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಸಮಾವೇಶ ಕುರಿತು ಪೂರ್ವ ಭಾವಿ ಸಭೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ಜ.21 ರಂದು ಪ್ರತೀ ರಾಜ್ಯಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಸಮಾವೇಶವನ್ನು ಮಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ರಾಜ್ಯದ ಸುಮಾರು 1 ಲಕ್ಷ ಪ್ರತಿನಿಧಿಗಳು ಸೇರುವ ನಿರೀಕ್ಷಿಸಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೂತ್, ಗ್ರಾಮ, ವಾರ್ಡ್, ಬ್ಲಾಕ್ ಮಟ್ಟದ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ತಪ್ಪದೇ ಭಾಗವಹಿಸುವಂತೆ ನೋಡಿಕೊಳ್ಳಲು ಸೂಚಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿ ವಿವಿಧ ಸಮಿತಿಗಳನ್ನು ರಚಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ್ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಜೆ.ಆರ್. ಲೋಬೊ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಧುರೀಣರಾದ ಇಬ್ರಾಹೀಂ ಕೋಡಿಜಾಲ್, ಪಿ.ವಿ ಮೋಹನ್, ಮಮತಾ ಗಟ್ಟಿ, ರಕ್ಷಿತ್ ಶಿವರಾಮ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಅಶೋಕ್ ಕೊಡವೂರ್, ಯು.ಕೆ ಮೋನು, ಎಂ.ಎ ಗಫೂರ್, ಸದಾಶಿವ ಉಳ್ಳಾಲ್ ಮತ್ತಿತರರು ಭಾಗವಹಿಸಿದ್ದರು.




Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News