ಜ.24-28: ಮಂಗಳೂರು ಆಹಾರ ಪಥ ಉತ್ಸವ
ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜ.24ರಿಂದ 28ರವರೆಗೆ ‘ಮಂಗಳೂರು ಸ್ಟ್ರೀಟ್ ಫುಡ್ ಫೆಸ್ಟಿವಲ್’ ದ್ವಿತೀಯ ಆವೃತ್ತಿಯ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.
ನಗರದ ಖಾಸಗಿ ಹೊಟೇಲಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಬಾರಿ ನಡೆದ ಸ್ಟ್ರೀಟ್ ಫುಡ್ ಫಿಯೆಸ್ಟ ಯಶಸ್ವಿಯಾಗಿದೆ. ಆ ಹಿನ್ನೆಲೆಯಲ್ಲಿ ಈ ಬಾರಿಯೂ ‘ಮಂಗಳೂರು ಆಹಾರ ಪಥ ಉತ್ಸವ’ ಆಯೋಜಿಸಲಾಗಿದೆ. ಜ.24ರ ಸಂಜೆ 7ಕ್ಕೆ ಅಧಿಕೃತ ಚಾಲನೆ ನೀಡಲಾಗುವುದು ಎಂದರು.
ಕರಾವಳಿ ವಸ್ತು ಪ್ರದರ್ಶನ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವದವರೆಗೆ 160 ವಿಶೇಷ ಆಹಾರ ಮಳಿಗೆಗಳಲ್ಲಿ ಬುಧವಾರ ಮತ್ತು ಗುರುವಾರ ಸಂಜೆ 4ರಿಂದ ರಾತ್ರಿ 10:30ರವರೆಗೆ ಮತ್ತು ಶುಕ್ರವಾರ, ಶನಿವಾರ, ರವಿವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10:30ರ ತನಕ) ಸ್ಟ್ರೀಟ್ ಫುಡ್ ಫಿಯೆಸ್ಟ ನಡೆಯ ಲಿದೆ. ರಾಜ್ಯ-ದೇಶದ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರವನ್ನು ಪರಿಚಯಿಸಲಾಗುತ್ತಿದೆ ಎಂದು ವೇದವ್ಯಾಸ ಕಾಮತ್ ಹೇಳಿದರು.
ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿಯಲ್ಲದೆ ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸಹಿತ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸಸ್ಯಾಹಾರಿ, ಮಾಂಸಾಹಾರಿ ಸಹಿತ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಇರಲಿವೆ. ಈ ಬಾರಿ ಡಿಜಿಟಲ್ ವಹಿವಾಟಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅದಲ್ಲದೆ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೊಟ್ಟಾರ ಚೌಕಿ ಕಡೆಯಿಂದ ಬರುವ ವಾಹನಗಳಿಗೆ ಉರ್ವ ಚರ್ಚ್ ಆವರಣ, ಉರ್ವ ಆಟದ ಮೈದಾನ, ಹಾಗೂ ಲೇಡಿಹಿಲ್ ವಿಕ್ಟೋರಿಯಾ ಕಾಲೇಜು ಆವರಣ ಹಾಗೂ ಲಾಲ್‌ಬಾಗ್ ಕಡೆಯಿಂದ ಬರುವ ವಾಹನಗಳಿಗೆ ಕೆನರಾ ಉರ್ವ ಶಾಲೆಯ ಆವರಣ ಮತ್ತು ಕರಾವಳಿ ಉತ್ಸವ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದರು.
*ಕಿಡ್ ಜೋನ್‌ಗೆ ವಿಶೇಷ ಪ್ರಾಧಾನ್ಯತೆ: ಕಳೆದ ಬಾರಿ ಇದ್ದಂತಹ ಹತ್ತು ಹಲವು ಮನರಂಜನಾ ಕಾರ್ಯಕ್ರಮಗಳು ಈ ಬಾರಿಯೂ ಸಹ ಇರಲಿದೆ. ಮಕ್ಕಳ ಆಟದ ಜೋನ್‌ಗೆ ವಿಶೇಷ ಪ್ರಾಧಾನ್ಯತೆ ನೀಡಲಾಗಿದೆ. ಉತ್ಸವದ ಸಮಯದಲ್ಲಿ ಹಲವು ವೇದಿಕೆಗಳಲ್ಲಿ ಏಕಕಾಲಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವವನ್ನು ವೇದಿಕೆಗಳಲ್ಲಿ ಆಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ್, ರಾಘವೇಂದ್ರ ಹೊಳ್ಳ, ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಉದಯ ಪೂಜಾರಿ ಉಪಸ್ಥಿತರಿದ್ದರು.