ಅಜ್ಜಿಬೆಟ್ಟು: ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಿ.ಮೂಡ ವತಿಯಿಂದ ಬಿ.ಸಿ.ರೋಡ್ ಸಮೀಪದ ಅಜ್ಜಿಬೆಟ್ಟು ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ನಡೆಯಿತು
ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ 2025-26 ಎಂಬ ಘೋಷಣೆಯಡಿ ನಡೆದ ಕಲಿಕಾ ಹಬ್ಬವನ್ನು ಉದ್ಘಾಟಿಸಿದ ಶಾಲಾಭಿವೃದ್ಧಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಹರೀಶ್ ಮಾಂಬಾಡಿ ಮಾತನಾಡಿ, ಸರಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಗುಣಮಟ್ಟವನ್ನು ವೃದ್ಧಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ಇದರ ಪ್ರಯೋಜನವನ್ನು ಪಡೆಯಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕಿ ಪ್ರತಿಮಾ ವೈ.ವಿ. ಮಾತನಾಡಿ, ಕಲಿಕಾ ಹಬ್ಬದಲ್ಲಿ ಭಾಗವಹಿಸುವ ಅವಕಾಶ ಪಡೆದಿರುವ ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಇತರ ಮಕ್ಕಳಿಗೂ ತಾವು ಕಲಿತದ್ದನ್ನು ಹಂಚಿ ಶೈಕ್ಷಣಿವಾಗಿ ಪ್ರಗತಿ ಹೊಂದಬೇಕು ಎಂದು ಸಲಹೆ ನೀಡಿದರು. ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ವಿನೋದಾ ಅಧ್ಯಕ್ಷತೆ ವಹಿಸಿದ್ದರು.
ಸಮೂಹ ಸಂಪನ್ಮೂಲ ವ್ಯಕ್ತಿ (ಬಿ.ಆರ್.ಸಿ) ಪ್ರೇಮಲತಾ ಕಲಿಕಾ ಹಬ್ಬದ ಆಶಯ, ಉದ್ದೇಶಗಳನ್ನು ತಿಳಿಸಿದರು. ಎಸ್.ಡಿ.ಎಂ.ಸಿ. ಸದಸ್ಯರಾದ ಜಯಂತಿ, ನಿಶ್ಮಿತಾ, ಕವಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹ ಶಿಕ್ಷಕಿ ವಿಮಲಾ, ಅತಿಥಿ ಹಾಗೂ ಗೌರವ ಶಿಕ್ಷಕರಾದ ನಿಶ್ಮಿತಾ, ಪೂರ್ಣಿಮಾ, ಲಾವಣ್ಯ, ದಿವ್ಯಾ, ಶಿವಮೂರ್ತಿ ವಿವಿಧ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಸಹಕರಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಲಕ್ಷ್ಮೀ ಕೆ. ಸ್ವಾಗತಿಸಿ, ಸಹ ಶಿಕ್ಷಕಿ ಐರಿನ್ ಆರ್.ಎಸ್. ವಂದಿಸಿದರು. ಸಹ ಶಿಕ್ಷಕಿ ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು.