×
Ad

ಬೈಕಂಪಾಡಿ| ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆ: 25ಕ್ಕೂ ಅಧಿಕ ಮಂದಿ ಅಸ್ವಸ್ಥ

Update: 2025-08-01 18:09 IST

ಸುರತ್ಕಲ್‌: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆಗೆ ತುತ್ತಾಗಿ ಸುಮಾರು 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಗುರುವಾರ ವರದಿಯಾಗಿದೆ.

ಗಂಭೀರ ಸ್ಥಿತಿಯಲ್ಲಿರುವ ನಾಲ್ವರು ಕಾರ್ಮಿಕರು ಉತ್ತರ ಭಾರತ ಮೂಲದವರು ಎಂದು ತಿಳಿದು ಬಂದಿದ್ದು, ಇವರನ್ನು ಮುಕ್ಕ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸುಮಾರು 200ಕ್ಕೂ ಅಧಿಕ ಕಾರ್ಮಿಕರಿರುವ ಈ ಕಂಪೆನಿಯಲ್ಲಿ ಸಂಜೆಯ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಗುರುವಾರ ಸಂಜೆ ಸ್ಥಾವರದ ಒಳಗಿರುವ ಪೈಪ್‌ನಲ್ಲಿ ಅಮೋನಿಯಾ ಸೋರಿಕೆಯಾಗಿ ಕಾರ್ಮಿಕರಿಗೆ ಉಸಿರುಗಟ್ಟಿ ಬೊಬ್ಬೆ ಹೊಡೆದಿದ್ದಾರೆ. ತಕ್ಷಣ ಸೈರನ್ ಮೊಳಗಿಸಿ ಕಾರ್ಮಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿತ್ತು. ಆದರೆ ಸುಮಾರು 25ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥಗೊಂಡಿದ್ದು, ನಾಲ್ವರು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಕಂಪೆನಿಗೆ ಸ್ಥಳೀಯ ಎಂಸಿಎಫ್ ಸಹಿತ ಅಗ್ನಿಶಾಮಕ ಪಡೆಯು ಧಾವಿಸಿ ಕಾರ್ಯಾಚರಣೆ ನಡೆಸಿ ಅಮೋನಿಯ ಸೋರಿಕೆ ನಿಯಂತ್ರಿಸಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಂಗಳೂರು ತಹಶೀಲ್ದಾ‌ರ್, ಉಪ ತಹಶೀಲ್ದಾ‌ರ್, ಕಂದಾಯ ಅಧಿಕಾರಿಗಳು ಧಾವಿಸಿ ತುರ್ತು ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂಬಂಧ ಪಣಂಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News